ಮತದಾನ: ಜನರಲ್ಲಿ ಜಾಗೃತಿ ಮೂಡಿಸಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಮಾ. 28
ಸರ್ಕಾರಿ ನೌಕರರು ಕಡ್ಡಾಯ ಹಾಗೂ ಮುಕ್ತ ಮತದಾನ ಮಾಡುವಂತೆ ಮತದಾರರಿಗೆ ಜಾಗೃತಿ ಮೂಡಿಸುವುದರ ಜತೆಗೆ ನೌಕರರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಸಲಾವುದ್ದೀನ್ ಕರೆ ನೀಡಿದರು.
ಜಿಲ್ಲಾ ಸ್ವೀಪ್, ಜಿಲ್ಲಾ ಸರ್ಕಾರಿ ನೌಕರರ ಸಂಘ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ನಗರದ ಅಧಿದೇವತೆ ಶ್ರೀದುರ್ಗಮ್ಮ ದೇವಸ್ಥಾನದ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಬ್ಬ ಮತದಾರರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ಬಲಪಡಿಸಬೇಕು. ಯಾವುದೇ ಆಮಿಷಗಳಿಗೆ ಒಳಗಾಗದೇ ಮತದಾನ ಚಲಾಯಿಸಬೇಕು. ಜಾಗ್ರತ ಮತದಾರ ಪ್ರಜಾಪ್ರಭುತ್ವದ ನೇತಾರ. ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತದಾನವಾಗಲು ಸರ್ಕಾರಿ ನೌಕರರ ಪಾತ್ರ ಮಹತ್ತರವಾದುದು. ಯಾವುದೇ ಸರ್ಕಾರಿ ನೌಕರರು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳ ಪರವಾಗಿ ಕಾರ್ಯನಿರ್ವಹಿಸುವುದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಎಚ್ಚರಿಸಿದರು.
ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಟಿ. ಮಲ್ಲೇಶ್ ಮಾತನಾಡಿ, ಮುಕ್ತ ಮತ್ತು ನ್ಯಾಯ ಸಮ್ಮತ ಮತದಾನ ಪ್ರಕ್ರಿಯೆಗೆ ಸಂಪೂರ್ಣವಾಗಿ ಸಹಕರಿಸಿ ಚುನಾವಣಾ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದರು.
ಜಿಪಂ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ, ಡಿಡಿಪಿಐ ವೀರಣ್ಣ ಜತ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕಲಾದಗಿ, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ, ಡಿಎಚ್‌ಒ ಡಾ. ಪಾಟೀಲ್, ವಾರ್ತಾಧಿಕಾರಿ ಎಚ್. ಶ್ರೀನಿವಾಸ, ನೌಕರರ ಸಂಘದ ಕಾರ್ಯದರ್ಶಿ ಜಿ.ಕೆ. ರಾಮಕೃಷ್ಣ, ರಾಜ್ಯ ಜಂಟಿ ಕಾರ್ಯದರ್ಶಿ ಪಿ. ನಾಗರಾಜ್, ಶಿವಾಜಿರಾವ್, ಉಪಾಧ್ಯಕ್ಷ ಆನಂದ್ ನಾಯಕ್, ಕೆ. ಮರಿಸ್ವಾಮಿ, ಕೆ. ಪಂಪನಗೌಡ, ಎಂ.ಪಿ. ಶಂಕರ್ ಮೂಲೆ, ವೆಂಕಟೇಶ್, ಪಿ. ವಿರೂಪಾಕ್ಷ ವಿವಿಧ ಪದಾಧಿಕಾರಿಗಳು, ಅಧಿಕಾರಿಗಳು, ಶಿಕ್ಷಕರು, ವಿವಿಧ ಇಲಾಖೆಗಳ ನೌಕರರು ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಜಾಗೃತಿ ಜಾಥಾ ದುರ್ಗಮ್ಮ ದೇವಸ್ಥಾನದಿಂದ ರಾಯಲ್ ಸರ್ಕಲ್, ಬ್ರೂಸ್‌ಪೇಟೆ ಪೊಲೀಸ್ ಠಾಣೆ ಮಾರ್ಗವಾಗಿ ಮೋತಿ ಸರ್ಕಲ್‌ವರೆಗೆ ಸಂಚರಿಸಿ ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ಮಾಡುವಂತೆ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಲಾಯಿತು. ಪ್ರಮುಖ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾರರ ಗಮನ ಸೆಳೆಯಿತು.