ಶಾಲಿನಿ ರಜನೀಶ ಸೇರಿ ಐವರಿಗೆ ಗೌಡಾ ಪ್ರದಾನ
ಕ.ಪ್ರ. ವಾರ್ತೆ ಬಿಜಾಪುರ ಮಾ. 3
ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಭಾನುವಾರ ನಡೆದ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕಿಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ವರ್ಣರಂಜಿತ ಸಮಾರಂಭದಲ್ಲಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮೀನಾ ಚಂದಾವರಕರ ಅವರು, ಐಎಎಸ್ ಅಧಿಕಾರಿ ಡಾ. ಶಾಲಿನಿ ರಜನೀಶ್, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್, ಡಾ. ವಿಜಯಲಕ್ಷ್ಮಿ ದೇಶಮಾನೆ, ತರಂಗ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಪೈ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಲೋಕಸಭೆ ಸ್ಪೀಕರ್ ಆರ್. ಮೀರಾ ಕುಮಾರ್ ಅವರ ಅನುಪಸ್ಥಿತಿಯಿಂದಾಗಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿಲ್ಲ.
ಚಿನ್ನದ ಹುಡುಗಿಯರು: ಇದೇ ಸಂದರ್ಭದಲ್ಲಿ 2011 ಜುಲೈಯಿಂದ 2012ರ ಜೂನ್‌ವರೆಗೆ ಜರುಗಿದ ವಿಶ್ವವಿದ್ಯಾಲಯದ ವಿವಿಧ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಅತಿ ಹೆಚ್ಚು ಅಂಕ ಗಳಿಸಿದ 39 ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ವಿದ್ಯಾರ್ಥಿನಿ ಸಂಗೀತಾ ಸಿದ್ದನಗೌಡ ಪಾಟೀಲ ಅವರು 3 ಚಿನ್ನದ ಪದಕ ಗಳಿಸಿದ್ದು, ಎಸ್‌ಜೆಎಂವಿ ಮಹಿಳಾ ಮಹಾವಿದ್ಯಾಲಯದ ಬಸಿರತ್ ಬಝಿಗಾ ಮುಲ್ಲಾ 2, ಬಿಜಾಪುರ ಮಹಿಳಾ ವಿವಿ ಮಹಿಳಾ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ನಿವೇದಿತಾ ನಲವಡೆ 2, ಮಹಿಳಾ ವಿವಿ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಸುಮಿತ್ರಾ ಮರಿತಮ್ಮಣ್ಣವರ 2, ಬಿಜಾಪುರ ಮಹಿಳಾ ವಿವಿಯ ಕನ್ನಡ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ರೂಪಾ ಇಂಗಳೆ 2 ಚಿನ್ನದ ಪದಕ ಪಡೆದಿದ್ದಾರೆ. 13 ಮಂದಿಗೆ ಪಿಎಚ್‌ಡಿ ಪ್ರದಾನ ಮಾಡಲಾಯಿತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.