ಬಿಜಾಪುರ: ನಗರದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ವತಿಯಿಂದ ಮೇ 1ರಂದು ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅನೌಪಚಾರಿಕ ಶಿಕ್ಷಣ ಸಂಸ್ಥೆ, ಸ್ಲಂ ಅಭಿವೃದ್ಧಿ ಕೇಂದ್ರ, ನಗರ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಯೂನಿಯನ್, ಗೃಹ ಕಾರ್ಮಿಕರ ಯೂನಿಯನ್, ಮಹಾತ್ಮಾ ಗಾಂಧಿ ಅಟೋ ಚಾಲಕರ ಯೂನಿಯನ್‌ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಮಿಕ ದಿನಾಚರಣೆ ಆಯೋಜಿಸಲಾಗಿದೆ.
ಮೇ 1ರಂದು ಬೆಳಗ್ಗೆ 10.30ಕ್ಕೆ ನಗರದ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧೆಡೆ ಸಂಚರಿಸುವ ಜಾಥಾದಲ್ಲಿ ಕಾರ್ಮಿಕರು ಭಾಗವಹಿಸಲಿದ್ದಾರೆ. ಅನಂತರ ಗಾಂಧಿ ಚೌಕ ಬಳಿ ಇರುವ ಸಂತ ಅನ್ನಮ್ಮ ದೇವಾಲಯ ತಲುಪುವುದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ನಿವಾಸ ಸೆಪಟ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಅನೌಪಚಾರಿಕ ಶಿಕ್ಷಣ ಸಂಸ್ಥೆ ನಿರ್ದೇಶಕ ಫಾದರ್ ಜೆರಾಲ್ಡ್ ಡಿಸೋಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಕಾರ್ಮಿಕ ಅಧಿಕಾರಿ ಎ.ಎಸ್. ಪಾಟೀಲ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಎಸ್.ಯು.ಸಿ.ಆಯ್. ಸಂಚಾಲಕ ಭಗವಾನರೆಡ್ಡಿ ಉಪನ್ಯಾಸ ನೀಡಲಿದ್ದಾರೆ. ಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.