ರಸ್ತೆಗಾಗಿ ಭೂಸ್ವಾಧೀನ ಸಲ್ಲ: ಪ್ರತಿಭಟನೆ
ಯಳಂದೂರು: ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳಲು ಮುಂದಾಗಿರುವುದನ್ನು ಖಂಡಿಸಿ ತಾಲೂಕಿನ ರೈತರು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘದ ಮುಖಂಡ ಹೊನ್ನೂರು ಪ್ರಕಾಶ್ ಮಾತನಾಡಿ, ಯಳಂದೂರು ತೀರಾ ಹಿಂದುಳಿದ ಸಣ್ಣ ತಾಲೂಕು ಕೇಂದ್ರವಾಗಿದ್ದು, ದಲಿತರು ಮತ್ತು ಹಿಂದುಳಿದ ವರ್ಗದವರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಎಲ್ಲರೂ ಅರ್ಧ ಎಕರೆಯಿಂದ 1 ಎಕರೆವರೆಗೆ ಮಾತ್ರ ಭೂಮಿ ಹೊಂದಿದ್ದಾರೆ. ಅಂಥದರಲ್ಲಿ ರಾ.ಹೆ. ಪ್ರಾಧಿಕಾರದವರು ಮುಂಚಿತ ಸೂಚನೆ ನೀಡದೆ ಜಮೀನು ವಶಪಡಿಸಿಕೊಳ್ಳಲು ಹೊರಟಿರುವುದು ಸರಿಯಲ್ಲ ಎಂದರು.
ಕೃಷಿ ಜಮೀನುಗಳನ್ನು ರಸ್ತೆ ಮಾಡಲು ವಶಪಡಿಸಿಕೊಳ್ಳಲು ನೋಟಿಸ್ ಜಾರಿ ಮಾಡಿ ಬಡ ರೈತರು, ಸಣ್ಣ ರೈತರ ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ಮಾಡುತ್ತಿದೆ. ಕೂಡಲೆ ಅಧಿಕಾರಿಗಳು ಪರಿಶೀಲನೆ ಮಾಡಿ ಹಾಲಿ ಇರುವ ರಸ್ತೆಯನ್ನೇ ಅಗಲೀಕರಣ ಮಾಡಿ, ರಸ್ತೆ ಬದಿಯಲ್ಲಿರುವ ನಿವಾಸಿಗಳಿಗೆ ಹೊಸ ನಿವೇಶನಗಳನ್ನು ಕೊಡಿಸಿ, ಕೃಷಿ ಜಮೀನನ್ನು ಕೈಬಿಡಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನಾ ಸ್ಥಳಕ್ಕೆ ಕೊಳ್ಳೇಗಾಲ ಉಪವಿಭಾಗಾಧಿಕಾರಿ ಸತೀಶ್ಬಾಬು ಭೇಟಿ ನೀಡಿ ಮಾತನಾಡಿ, ಚುನಾವಣೆ ನೀತಿ ಸಂಹಿತೆ ಇರುವುದರಿಂದ ಅಧಿಕಾರಿಗಳು ಸಕಾಲದಲ್ಲಿ ಸಿಗುತ್ತಿಲ್ಲ. ಚುನಾವಣೆ ಮುಗಿದ ಬಳಿಕ ಅಧಿಕಾರಿಗಳನ್ನು ಕರೆಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಮನವಿ ಮಾಡಿದ್ದರಿಂದ ರೈತರು ಹೋರಾಟ ಕೈ ಬಿಟ್ಟರು. ತರಬೇತಿ ಉಪ ವಿಭಾಗಾಧಿಕಾರಿ ಇ. ವಿಜಯ, ತಹಸೀಲ್ದಾರ್ ಶಿವನಾಗಯ್ಯ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.