ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಕುರುಬನಕಟ್ಟೆಯಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮ ಮುಗಿಸಿ ಊರಿಗೆ ವಾಪಸ್ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮಂಗಲ ಗ್ರಾಮದ ಗೀತಾ (23) ಮೃತಪಟ್ಟವರು. ಘಟನೆಯಲ್ಲಿ ತೀವ್ರ ಗಾಯಗೊಂಡ ಪುಟ್ಟರಂಗಶೆಟ್ಟಿ, ಶಿವಣ್ಣ, ಶೋಭಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಣ್ಣ ಪುಟ್ಟ ಗಾಯಗೊಂಡಿದ್ದ 10 ಮಂದಿಯನ್ನು ಚಾಮರಾಜನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ರಾಜೇಂದ್ರ ಪ್ರಸಾದ್, ಡಿವೈಎಸ್ಪಿ ಮುತ್ತುಸ್ವಾಮಿ ನಾಯ್ಡು, ಸಿಪಿಐ ನಿರಂಜನ್ ರಾಜೇಅರಸ್ ಭೇಟಿ ನೀಡಿದ್ದರು. ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕರಿಗೆ ಟಿಕೆಟ್ ನೀಡಲು ಮನವಿ
ಚಾಮರಾಜನಗರ: ಜಿಲ್ಲೆಯ ನಾಲ್ಕು ವಿಧಾನಸಭಾ ಕೇತ್ರದಲ್ಲಿ ಒಂದು ಕ್ಷೇತ್ರದಲ್ಲಾದರೂ ಯುವಕರಿಗೆ ಆದ್ಯತೆ ನೀಡಬೇಕೆಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಪೃಥ್ವಿರಾಜ್ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಪ್ರಾಮಾಣಿಕ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ಲೋಕಸಭಾ ಹಾಗೂ ಹತ್ತಾರು ವರ್ಷಗಳಲ್ಲಿ ಪಕ್ಷದ ಸಂಘಟನೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯುವ ಮತದಾರರು ಹೆಚ್ಚಿರುವ ದೇಶದಲ್ಲಿ ಯುವಕರಿಗೆ ಟಿಕೆಟ್ ನೀಡಿ, ಪಕ್ಷ ಬಲಪಡಿಸಲು ಸಹಕಾರ ನೀಡಬೇಕೆಂದು ವರಿಷ್ಠರನ್ನು ವಿನಂತಿಸಿದ್ದಾರೆ.
ತೆಂಗಿನ ಮರಕ್ಕೆ ಬೆಂಕಿ
ಚಾಮರಾಜನಗರ: ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಆರ್ಯಕೇಸರಿ ಎಂಬವರ ಮನೆ ಮುಂಭಾಗದ ತೆಂಗಿನ ಮರದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ತಂತಿಗೆ ತಗುಲುತ್ತಿದ್ದ ತೆಂಗಿನ ಗರಿಗಳನ್ನು ಕತ್ತರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಸಕಾಲಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಳೆ ರೈತ ಸಂಘ ಸಭೆ
ಚಾಮರಾಜನಗರ: ಮುಂಬರುವ ವಿಧಾನಸಭಾ ಚುನಾವಣೆ ಬಗ್ಗೆ ಚರ್ಚಿಸಲು ಮಾ.31ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಶಾಖೆಯ ಸಭೆ ಕರೆಯಲಾಗಿದೆ. ಸಂಘದ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಸಂಘದ ಪದಾಧಿಕಾರಿಗಳು, ತಾಲೂಕು ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಪ್ರಕಾಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.