ಕಾನೂನು ಸಾಕ್ಷರತಾ ರಥ ಪ್ರವಾಸ
ಕ.ಪ್ರ. ವಾರ್ತೆ, ಚಿಕ್ಕಮಗಳೂರು, ಏ.16
ಪ್ರತಿಯೊಬ್ಬ ವ್ಯಕ್ತಿಗೂ ಕಾನೂನಿನ ಜ್ಞಾನದ ಬಗ್ಗೆ ಅರಿವು ಮೂಡಿಸಲು ಕಾನೂನು ಸಾಕ್ಷರತಾ ರಥ ಪ್ರವಾಸ ಆಯೋಜಿಸಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಬಸವರಾಜ್ ಎ. ಪಾಟೀಲ್ ಹೇಳಿದ್ದಾರೆ.
ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಇತ್ತೀಚೆಗೆ ಕಾನೂನು ಸಾಕ್ಷರತಾ ರಥ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬ ವ್ಯಕ್ತಿಯೂ ಕಾನೂನಿನ ಅರಿವು ಪಡೆದು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಪೌಷ್ಠಿಕ ಆಹಾರದ ಮಹತ್ವ: ಪ್ರಸ್ತುತ ಭಾರತದಲ್ಲಿ ಗರ್ಭಿಣಿಯರು ಹಾಗೂ ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಅನೇಕ ಖಾಯಿಲೆಗಳಿಗೆ ತುತ್ತಾಗುತ್ತಿದ್ದು, ಎಲ್ಲರೂ ಪೌಷ್ಠಿಕ ಆಹಾರದ ಮಹತ್ವವನ್ನು ಅರಿತುಕೊಳ್ಳಬೇಕು. ಇದರಿಂದ ಆರೋಗ್ಯ ಉತ್ತಮಗೊಂಡು ಮನುಷ್ಯನ ಬೆಳವಣಿಗೆ ವೃದ್ಧಿಯಾಗಲಿದೆ ಎಂದು ಹೇಳಿದರು.
ವಕೀಲರ ಸಂಘದ ಕಾರ್ಯದರ್ಶಿ ಸಿ.ಪಿ. ದುಗ್ಗೇಗೌಡ ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಬಿ. ವಸ್ತ್ರಮಠ, ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಅಮರನಾರಾಯಣ, ಹಿರಿಯ ಸಿವಿಲ್ ನ್ಯಾಯಾಧೀಶೆ ಬಿ.ವಿ. ರೇಣುಕಾ, ವಾರ್ತಾಧಿಕಾರಿ ಖಾದರ್ ಶಾ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ವೈದ್ಯ ಡಾ. ಶಿವದತ್ ಅವರು, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಪೌಷ್ಠಿಕಾಂಶಗಳ ಮಹತ್ವ ಮತ್ತು ಅಪೌಷ್ಠಿಕತೆಯ ದುಷ್ಪರಿಣಾಮ ಕುರಿತು ಉಪನ್ಯಾಸ ನೀಡಿದರು.