'ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ'
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.20
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಾಮ ಮಾರ್ಗದಲ್ಲಿ ಚುನಾವಣೆ ನಡೆಸಲು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಎಲ್. ಭೋಜೇಗೌಡ ಆರೋಪಿಸಿದ್ದಾರೆ.
ಸಚಿವರು ಇಡೀ ಆಡಳಿತ ಯಂತ್ರ ಮತ್ತು ಸರ್ಕಾರಿ ಅಧಿಕಾರಿಗಳನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಲಿನ ಭೀತಿಯಿಂದ ಅಕ್ರಮ ದಾರಿಯಲ್ಲಿ ಸಾಗುತ್ತಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣ, ಬೋರ್ವೆಲ್ ಕೊರೆಸುವುದು ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಅವುಗಳನ್ನು ತಡೆಯಲು ನಮ್ಮ ಪಕ್ಷದ ಕಾರ್ಯಕರ್ತರು ಸ್ಥಳಕ್ಕೆ ಹೋದರೆ ಘರ್ಷಣೆ ನಡೆಯುವ ಸಾಧ್ಯತೆ ಇರುತ್ತದೆ. ಅದುದರಿಂದ ಈ ವಿಷಯವನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳ ಗಮನಕ್ಕೆ ತರಲಾಗಿದೆ.
ಆದರೆ, ಅಧಿಕಾರಿಗಳು ಸಚಿವರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ನಿರಂತರವಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿದರು.
ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು ನಮ್ಮ ಸಹಕಾರ ಇದೆ. ಬಿಜೆಪಿ ಅಭ್ಯರ್ಥಿ, ಮನೆ ಮನೆಗಳಿಗೆ ತೆರಳಿ ಕೆಲವು ವಸ್ತುಗಳನ್ನು ಹಂಚುತ್ತಿದ್ದಾರೆ ಎಂದು ದೂಷಿಸಿದರು.