ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಚುನಾವಣಾ ಸಿದ್ಧತೆ: ಆಯೋಗ ಮೆಚ್ಚುಗೆ

Rashmi Kasaragodu
Updated On : 23 Apr 2013, 11:49 am

ಕ.ಪ್ರ. ವಾರ್ತೆ   ಚಿಕ್ಕಮಗಳೂರು   ಏ.22
ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿರುವ ಚುನಾವಣಾ ಪೂರ್ವ ಸಿದ್ಧತೆಗಳಿಗೆ ಕೇಂದ್ರ ಚುನಾವಣಾ ಆಯೋಗದ ವೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ವೀಕ್ಷಕರು, ಮುಕ್ತ ಮತ್ತು ಶಾಂತಿಯುತ ಚುನಾವಣೆ ನಡೆಸಲು ಜಿಲ್ಲಾಡಳಿತ ಉತ್ತಮ ಕಾರ್ಯ ಮಾಡುತ್ತಿದೆ. ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಇದೇ ರೀತಿ ಮುಂದುವರಿಯಬೇಕು ಎಂದು ಹೇಳಿದರು.
ಸಮರ್ಪಕವಾಗಿದೆ: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕೇಂದ್ರ ವೀಕ್ಷಕ ಬಾಲಕೃಷ್ಣ ಮೀನಾ ಅವರು ಮಾತನಾಡಿ, ಭದ್ರತಾ ಪಡೆ ನಿಯೋಜನೆ, ಚೆಕ್ಪೋಸ್ಟ್ಗಳ ಸ್ಥಾಪನೆ ಸೇರಿದಂತೆ ಚುನಾವಣಾ ಸಿದ್ಧತೆಗಳು ಸಮರ್ಪಕವಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಗಮನಿಸಲು ಎಂಸಿಸಿ ತಂಡಗಳು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ ಎಂದು ಹೇಳಿದರು.
ಎಲ್ಲರೂ ಕೈಜೋಡಿಸಬೇಕು: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕೇಂದ್ರ ವೀಕ್ಷಕ ಎ. ಶೇಖರ್ ಬಾಬು ಮಾತನಾಡಿ, ವಿಧಾನಸಭಾ ಚುನಾವಣೆ ಯಾವುದೇ ಗೊಂದಲಗಳಿಲ್ಲದೆ, ಯಶಸ್ವಿಯಾಗಿ ನಡೆಯಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಕಡೂರು ವಿಧಾನಸಭಾ ಕ್ಷೇತ್ರದ ಕೇಂದ್ರ ವೀಕ್ಷಕ ಬಾದಲ್ ಚಟರ್ಜಿ ಮಾತನಾಡಿ, ಚುನಾವಣೆ ಸಿದ್ಧತೆಯಲ್ಲಿ ವಿಶ್ವಾಸಾರ್ಹತೆ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ಕೈಗೊಂಡಿರುವ ಸಿದ್ಧತೆಗಳು ಪ್ರಶಂಸನೀಯ. ಹಗಲು ರಾತ್ರಿ ಎಂಸಿಸಿ ತಂಡಗಳ ಕರ್ತವ್ಯದಿಂದ ಮುಕ್ತ ಚುನಾವಣೆಗೆ ಸಹಕಾರಿಯಾಗಲಿದೆ ಎಂದರು.
ಎಚ್ಚರಿಕೆ ವಹಿಸಿ: ತರೀಕೆರೆ ವಿಧಾನಸಭಾ ಕ್ಷೇತ್ರದ ಕೇಂದ್ರ ವೀಕ್ಷಕ ಟಿ.ಎನ್. ವೆಂಕಟೇಶ್ ಅವರು ಮಾತನಾಡಿ, ಚುನಾವಣಾ ಕರ್ತವ್ಯದಲ್ಲಿ ತೊಡಗಿಕೊಂಡಿರುವ ಅಧಿಕಾರಿಗಳು ಯಾವುದೇ ರೀತಿಯ ಆರೋಪ ಬಾರದಂತೆ ಎಚ್ಚರಿಕೆ ವಹಿಸಬೇಕು. ಕೇಂದ್ರ ಚುನಾವಣಾ ಆಯೋಗ ಆಗಿಂದಾಗ್ಗೆ ನೀಡುವ ಸೂಚನೆಗಳನ್ನು ಪಾಲಿಸಬೇಕು ಎಂದು ಹೇಳಿದರು.
ಶ್ಲಾಘನೀಯ: ಕೇಂದ್ರ ಪೊಲೀಸ್ ವೀಕ್ಷಕ ಶ್ರೀಕಾಂತ್ ಜಾಧವ್ ಅವರು ಇದೇ ಸಂದರ್ಭದಲ್ಲಿ ಮಾತನಾಡಿ, ಜಿಲ್ಲೆಯ ನಕ್ಸಲ್ ಪೀಡಿತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಕಾರ್ಯ ನಡೆಸಿ, ಹೆಚ್ಚಿನ ಪ್ರಮಾಣದ ಮತದಾನ ನಡೆಸಲು ಆಗಿರುವ ಸಿದ್ಧತೆಗಳು ಶ್ಲಾಘನೀಯವಾಗಿದೆ ಎಂದರು. ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವಿ. ಯಶವಂತ್, ಚುನಾವಣೆಗೆ ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳನ್ನು ವಿವರಿಸಿದರು.
 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್ ಅವರು ಭದ್ರತಾ ಕಾರ್ಯಗಳ ಬಗ್ಗೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್ ಅವರು ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಂಡಿರುವ ಸ್ವೀಪ್ ಕಾರ್ಯಕ್ರಮಗಳ ವಿವರಗಳನ್ನು ಕೇಂದ್ರ ಚುನಾವಣಾ ಆಯೋಗದ ವೀಕ್ಷಕರಿಗೆ ನೀಡಿದರು. ಸಭೆಯಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement