ಅನರ್ಹರ ಪಾಲಾಗುತ್ತಿರುವ ಸವಲತ್ತು
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.24
ಸರ್ಕಾರದ ಸವಲತ್ತುಗಳು ಅನರ್ಹರ ಪಾಲಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಅವುಗಳನ್ನು ದಲಿತ ವರ್ಗಕ್ಕೆ ನೇರವಾಗಿ ತಲುಪಿಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಸಲಹೆ ಮಾಡಿದ್ದಾರೆ.
ನಗರದ ಅಂಬೇಡ್ಕರ್ ಶಾಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಘಟಕ ಬುಧವಾರ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮದ್ಯವರ್ತಿಗಳ ಹಾವಳಿ: ದಲಿತರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಆ ವರ್ಗಕ್ಕೆ ಅನೇಕ ಸವಲತ್ತುಗಳನ್ನು ನೀಡುತ್ತಿವೆ. ಆದರೆ, ಮದ್ಯವರ್ತಿಗಳು ಮತ್ತು ಪ್ರಭಾವಿ ವ್ಯಕ್ತಿಗಳಿಂದಾಗಿ ಅವುಗಳು ಅನರ್ಹರ ಪಾಲಾಗುತ್ತಿವೆ ಎಂದು ವಿಷಾಧ ವ್ಯಕ್ತಪಡಿಸಿದರು.
ಹಣ ನೀಡಿದವರಿಗೆ ಮತ್ತು ಪ್ರಭಾವಿ ವ್ಯಕ್ತಿಗಳಿಗೆ ಸರ್ಕಾರದ ಸವಲತ್ತುಗಳು ದೊರೆಯುತ್ತಿರುವುದರಿಂದಾಗಿ ಗ್ರಾಮೀಣ ಭಾಗದ ಅರ್ಹ ದಲಿತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಅವರು, ಈ ಹಿನ್ನೆಲೆಯಲ್ಲಿ ಸರ್ಕಾರದ ಸವಲತ್ತುಗಳನ್ನು ನೇರವಾಗಿ ದಲಿತ ವರ್ಗಕ್ಕೆ ತಲುಪಿಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ವಿಚಾರಧಾರೆ ಅಳವಡಿಸಿಕೊಳ್ಳಿ: ಡಿಸಿಸಿ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ರಂಗಪ್ಪ ಮಾತನಾಡಿ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮಗಳು ಅವರ ಭಾವಚಿತ್ರಕ್ಕೆ ಅಥವಾ ಪುತ್ತಳಿಗೆ ಹಾರ ಹಾಕುವುದಕ್ಕಷ್ಟೇ ಸೀಮಿತವಾಗಬಾರದು. ಅದರ ಬದಲಿಗೆ ಅವರ ವಿಚಾರಧಾರೆ ಮತ್ತು ಸಂದೇಶಗಳನ್ನು ದಲಿತ ಮಕ್ಕಳಿಗೆ ತಿಳಿಸುವ ಮೂಲಕ ಅವರನ್ನು ಜಾಗೃತಿಗೊಳಿಸುವ ಕೆಲಸವಾಗಬೇಕು ಎಂದು ಸಲಹೆ ಮಾಡಿದರು.
ಅಂಬೇಡ್ಕರ್ ಅವರ ಆಶಯದಂತೆ ದಲಿತರನ್ನು ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಮತ್ತು ಆರ್ಥಿಕವಾಗಿ ಬೆಳೆಸುವ ಕೆಲಸವಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಸಂಚಾಲಕ ಮರ್ಲೆ ಅಣ್ಣಯ್ಯ, ಮೇ ಅಥವಾ ಜೂನ್ ತಿಂಗಳಿನಲ್ಲಿ ನಗರದಲ್ಲಿ ದಲಿತರ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಮೀನಾಕ್ಷಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಸ್ಸಿ, ಎಸ್ಟಿ ನೌಕರರ ಸಂಘದ ಅಧ್ಯಕ್ಷ ಹಾಲಪ್ಪ ಉಪಸ್ಥಿತರಿದ್ದರು.
ಶ್ರೀಗಂಗಾ ಪ.ಜಾತಿ ಪ.ವರ್ಗದ ಮೀನುಗಾರರ ಸಂಘದ ಅಧ್ಯಕ್ಷ ವಿ. ಧರ್ಮೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ನ್ಯಾಯವಾದಿ ದೊಡ್ಡಯ್ಯ ಸ್ವಾಗತಿಸಿದರು. ರಘು ವಂದಿಸಿದರು.