ಇಂದು ಸಹಿ ಸಂಗ್ರಹ ಅಭಿಯಾನ
ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ ಏ.26
ಮೇ 5ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮತದಾರರಿಗೆ ಜಾಗೃತಿ ಮೂಡಿಸಲು ಶಿವಮೊಗ್ಗ ಜಿಲ್ಲಾಡಳಿತ ಏ.27ರಂದು ಬೆಳಗ್ಗೆ 11ಕ್ಕೆ ಕುವೆಂಪು ರಂಗಮಂದಿರದ ಮುಂಭಾಗ ಬೃಹತ್ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದೆ.
ನಾಲ್ಕು ಅಡಿ ಅಗಲ 100 ಅಡಿ ಉದ್ದದ ಬೃಹತ್ ಕ್ಯಾನ್ವಾಸ್ ಮೇಲೆ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಸಹಿಗಳನ್ನು ಸಂಗ್ರಹಿಸುವ ಮೂಲಕ ಮತದಾರರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡುವುದು ಅಭಿಯಾನದ ಉದ್ದೇಶ.
27ರಂದು ಶನಿವಾರ ಬೆಳಗ್ಗೆ 11ಕ್ಕೆ ಕುವೆಂಪು ರಂಗಮಂದಿರದ ಮುಂಭಾಗದಲ್ಲಿ ನಿರ್ಮಿಸಿರುವ ಬೃಹತ್ ಪರದೆ ಮೇಲೆ ಸಹಿ ಮಾಡುವ ಮೂಲಕ ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಕುವೆಂಪು ವಿಶ್ವ ವಿದ್ಯಾಲಯದ ಕುಲಪತಿ ಎಸ್.ಎ. ಬಾರಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಶಿವಮೊಗ್ಗ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ನೆಹರು ಯುವ ಕೇಂದ್ರದ ವಿವಿಧ ಯುವ ಸಂಘಟನೆಗಳ ಕಾರ್ಯಕರ್ತರು, ಖ್ಯಾತ ನಾಮರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಕುವೆಂಪು ವಿಶ್ವ ವಿದ್ಯಾಲಯದ ಕುಲಪತಿ ಎಸ್.ಎ. ಬಾರಿ ಮತದಾರರಿಗೆ ಪ್ರತಿಜ್ಞಾವಿಧಿ ಬೋಧಿಸುವರು ಹಾಗೂ ಕೋರ್ಟ್ ವೃತ್ತದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು ಮಾನವ ಸರಪಳಿಯನ್ನು ಆಯೋಜಿಸಲಾಗಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಕಚೇರಿ ಮನವಿ ಮಾಡಿದೆ.