'ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ'
ಕ.ಪ್ರ.ವಾರ್ತ್ಣೆ ತರೀಕೆರೆ ಏ.26
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರ ಆಲೆ ಇದೆ ಎಂದು ಸಂಸದ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.
ಅವರು, ಮಾಜಿ ಶಾಸಕ ಎಸ್.ಎಂ. ನಾಗರಾಜ್ ಅವರ ನಿವಾಸದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯುತ್ತದೆ. ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸುವುದು ಖಚಿತ, ಜಿಲ್ಲೆಯಲ್ಲಿ ವಾತಾವರಣ ಚೆನ್ನಾಗಿದೆ. ಎಲ್ಲ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎಂದು ಅವರು ಹೆಳಿದರು.
ಮುಖ್ಯಮಂತ್ರಿ ಆಯ್ಕೆ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಪ್ರಜಾಪ್ರಭುತ್ವ ಮಾದರಿಯಲ್ಲಿ ಶಾಸಕಾಂಗ ಪಕ್ಷ ನಾಯಕರನ್ನು ಆಯ್ಕೆ ಮಾಡುತ್ತದೆ. ಪಕ್ಷದಲ್ಲಿ ದಕ್ಷ ನಾಯಕರಿದ್ದಾರೆ, ಎಲ್ಲರೂ ಒಗ್ಗಟ್ಟಿನಿಂದಿದ್ದೇವೆ ಎಂದು ತಿಳಿಸಿದರು. ಎಸ್.ಎಂ. ನಾಗರಾಜ್ ಮಾತನಾಡಿ, ಪಕ್ಷದ ಗೆಲವಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಘನಿ ಅನ್ವರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಸಮೀವುಲ್ಲಾ ಷರೀಫ್, ಜಿಲ್ಲಾ ಕಾಂಗ್ರೆಸ್ ಸಮಿತಿ ಖಚಾಂಚಿ ಆರ್. ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.