ಕಾವೇರಿದ ಚುನಾವಣಾ ಪ್ರಚಾರ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.28
ವಿಧಾನಸಭಾ ಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದಂತೆ ಜಿಲ್ಲೆಯಲ್ಲಿ ಪ್ರಚಾರದ ಅಬ್ಬರ ಕಾವೇರುತ್ತಿದೆ.
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಆದರೆ, ಕೆಜೆಪಿ ಮಾತ್ರ ಹಿನ್ನಡೆ ಸಾಧಿಸಿದೆ.
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಚಿಕ್ಕಮಗಳೂರು, ಕಡೂರು ಹಾಗೂ ತರೀಕೆರೆ ಕ್ಷೇತ್ರಗಳಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.
ಅನಿಷ್ಟ ಸರ್ಕಾರ: ಭಾನುವಾರದಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಕೊಪ್ಪ ಹಾಗೂ ಬೀರೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವನ್ನು ಕಳಂಕಿತ ಮತ್ತು ಅನಿಷ್ಟ ಸರ್ಕಾರವೆಂದು ಹೇಳುವ ಜತೆಗೆ ಇದನ್ನು ತೊಲಗಿಸಲು ಇನ್ನೊಂದು ವಾರ ಮಾತ್ರ ಬಾಕಿ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮತದಾರರಿಗೆ ಮನವಿ ಮಾಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಮೂಡಿಗೆರೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಬಿ.ಬಿ. ನಿಂಗಯ್ಯ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಅವರು ಸೋಮವಾರ ಶೃಂಗೇರಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುತ್ತಿದ್ದಾರೆ. ಶೃಂಗೇರಿಯ ಗೌರಿಶಂಕರ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಪ್ರಚಾರ ಭಾಷಣ ಮಾಡಲಿದ್ದಾರೆ.
ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಕೆಜೆಪಿ ತರೀಕೆರೆ, ಕಡೂರು ಮತ್ತು ಚಿಕ್ಕಮಗಳೂರು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಮೂಡಿಗೆರೆ ಮತ್ತು ಶೃಂಗೇರಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಚುನಾವಣಾ ಅಖಾಡಕ್ಕೆ ಇಳಿಸಿಲ್ಲ.
ತರೀಕೆರೆ ಕ್ಷೇತ್ರದಲ್ಲಿ ಕೆಜೆಪಿಯಿಂದ ಸ್ಪರ್ಧೆ ಮಾಡಿರುವ ಶಾಸಕ ಡಿ.ಎಸ್. ಸುರೇಶ್ ಹಾಗೂ ಕಡೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಜಿಪಂ ಮಾಜಿ ಅಧ್ಯಕ್ಷ ಬೆಳ್ಳಿಪ್ರಕಾಶ್, ಚಿಕ್ಕಮಗಳೂರು ಕ್ಷೇತ್ರದಲ್ಲಿ ಡಾ. ವೇದಮೂರ್ತಿ ಅವರು ಪ್ರಚಾರದಲ್ಲಿ ತೊಡಗಿದ್ದಾರೆ. ಇವರುಗಳು ತಮ್ಮ ಕಾರ್ಯಕರ್ತರೊಂದಿಗೆ ಮತಯಾಚನೆ ಮಾಡುತ್ತಿದ್ದಾರೆ. ಆದರೆ, ಈವರೆಗೆ ಕೆಜೆಪಿಯ ನಾಯಕರು ಈ ಮೂರು ಕ್ಷೇತ್ರಗಳತ್ತ ಸುಳಿದಿಲ್ಲ.
ಕೆಜೆಪಿಗೆ ಗುಡ್ ಬೈ: ಕೆಜೆಪಿ ಉದಯವಾದ ಸಂದರ್ಭದಲ್ಲಿ ವಿವಿಧ ಪಕ್ಷಗಳಿಂದ ಕೆಜೆಪಿಗೆ ಬಂದಿದ್ದ ಮುಖಂಡರು ಒಬ್ಬೊಬ್ಬರಾಗಿ ಪಕ್ಷವನ್ನು ತೊರೆಯುತ್ತಿದ್ದಾರೆ. ಜಿಲ್ಲಾ ಕೇಂದ್ರದಲ್ಲಿ ಈ ಸಂಖ್ಯೆ ಅಧಿಕವಾಗುತ್ತಿದೆ.
ಕೆಜೆಪಿಯ ವಿವಿಧ ಹುದ್ದೆಗಳಲ್ಲಿದ್ದವರ ಪೈಕಿ ಕೆಲವರು ಜೆಡಿಎಸ್ಗೆ, ಕಾಂಗ್ರೆಸ್ಗೆ ಮತ್ತೆ ಕೆಲವರು ಬಿಜೆಪಿಗೆ ಹೋಗಿದ್ದಾರೆ. ತಮಗೆ ಸರಿ ಎನಿಸಿದ ಪಕ್ಷಗಳತ್ತ ಮುಖ ಮಾಡಿದ್ದಾರೆ. ಜಿಲ್ಲಾ ಸಮಿತಿ ಹಾಗೂ ತಾಲೂಕು ಘಟಕಗಳ ಪ್ರಮುಖರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಇದು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಕೆಜೆಪಿ ಅಭ್ಯರ್ಥಿಯ ಮೇಲೆ ದುಷ್ಪರಿಣಾಮ ಬೀರಲಿದೆ. ಈ ಕಾರಣದಿಂದಲೇ ಚಿಕ್ಕಮಗಳೂರಿನಲ್ಲ್ಲಿ ಕೆಜೆಪಿ ಪ್ರಚಾರಕ್ಕೆ ಗ್ರಹಣ ಹಿಡಿದಿದೆ. ಇನ್ನು ಮಲೆನಾಡಿನ 2 ಕ್ಷೇತ್ರಗಳಲ್ಲಿ ಕೆಜೆಪಿಯ ಅಸ್ತಿತ್ವವೇ ಇಲ್ಲದಂತಾಗಿದೆ.