'ಲೈಂಗಿಕ ದೌರ್ಜನ್ಯ ತಡೆಗೆ ಕಠಿಣ ಶಿಕ್ಷೆ ಅಗತ್ಯ'
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.30
ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯಲು ಕಠಿಣ ಕಾನೂನು ಕ್ರಮ ರೂಪಿಸಬೇಕು ಎಂದು ಯುವಶಕ್ತಿ ಮಾನವತಾ ವೇದಿಕೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಈ ಸಂಬಂಧ ವೇದಿಕೆಯ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿ ವಿ. ಯಶವಂತ್ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿಯ ಸುಳೆಬಾವಿಯ ಬಳಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಗೈದು ಕೊಲೆ ಮಾಡಲಾಗಿದೆ. ಶಿಕ್ಷಣಾಧಿಕಾರಿಯಿಂದ ಮೈಸೂರಿನ ಯುವತಿಯ ಮೇಲೆ ನಡೆದ ದೈಹಿಕ ಮತ್ತು ಮಾನಸಿಕ ಶೋಷಣೆಯನ್ನು ವೇದಿಕೆ ಖಂಡಿಸುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮಹಿಳಾ ದೌರ್ಜನ್ಯ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಆಗಾಗ ಮರುಕಳಿಸುತ್ತಿವೆ. ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಇಂತಹ ಕೃತ್ಯಗಳಿಂದ ಮಹಿಳೆಯರು ಮತ್ತು ಮಕ್ಕಳ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದ್ದು ನೆಮ್ಮದಿಯಿಂದ ಬದುಕು ಸಾಗಿಸುವುದಾದರೂ ಹೇಗೆ ಎಂದು ವೇದಿಕೆ ಪ್ರಶ್ನಿಸಿದೆ.
ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯಲು ಕಠಿಣ ಕಾನೂನು ಕ್ರಮ ರೂಪಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಆದೇಶಿಸಬೇಕು ಎಂದು ಒತ್ತಾಯಿಸಿದೆ. ಈ ಸಂದರ್ಭದಲ್ಲಿ ವೇದಿಕೆಯ ಅಧ್ಯಕ್ಷ ಸತೀಶ್, ಸದಸ್ಯರುಗಳಾದ ಮಧು, ರಘು, ಸುರೇಶ್ ಹಾಜರಿದ್ದರು.