ವಿಕಲಚೇತನರ ಅಭಿವೃದ್ಧಿಗೆ ಆದ್ಯತೆ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಆ.1
ಸರ್ಕಾರವು ವಿಕಲಚೇತನರ ಅಭಿವೃದ್ಧಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು ಅದರ ಸದ್ಬಳಕೆಯೊಂದಿಗೆ ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ಬಂದು ಸ್ವಾವಲಂಭಿಗಳಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಕರೆ ನೀಡಿದ್ದಾರೆ.
ತಾಲೂಕಿನ ಲಕ್ಯಾ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ- ಎಸ್ಪಿಐಡಿ ಸಂಸ್ಥೆ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಕಲಚೇತನರ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ವಿಕಲಚೇತನರ ಶ್ರೇಯೋಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳು ಹಮ್ಮಿಕೊಂಡಿದೆ. ಇದರ ಪ್ರಯೋಜನಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬಂದು ಸ್ವಾವಲಂಬಿಗಳಾಗಬೇಕು ಎಂದರು.
ಗ್ರಾಮಾಂತರ ಭಾಗದ ಜನರಿಗೆ ಸರ್ಕಾರಿ ಸೌಲಭ್ಯಗಳ ಅರಿವು ಇರುವುದಿಲ್ಲ. ವಿಕಲಚೇತನರಿಗೆ ಸರ್ಕಾರಿ ಸೌಲಭ್ಯಗಳ ಬಗ್ಗೆ ಅರಿವು ಇರುವುದಿಲ್ಲ ಇದಕ್ಕೆ ಹೆಚ್ಚಿನ ಪ್ರಚಾರದ ಅಗತ್ಯವಿದೆ ಎಂದ ಅವರು, ಸರ್ಕಾರವು ವಿಕಲಚೇತನರಿಗೆ ಬೇಕಾದ ಸಾಧನ ಸಲಕರಣೆಯನ್ನು ಒದಗಿಸುತ್ತಿದೆ. ಅರ್ಜಿ ಸಲ್ಲಿಸುವ ಮೂಲಕ ಪ್ರಯೋಜನ ಪಡೆದುಕೊಳ್ಳಬಹುದೆಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಈರಪ್ಪ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಶಂಕರೇಗೌಡ, ನೇತ್ರಾವತಿ, ನಾಗರಾಜು, ಫಿಸಿಯೋಥೆರಪಿಸ್ಟ್ ಧರ್ಮೇಶ್, ಡಾ. ಹೇಮಂತ್ ಉಪಸ್ಥಿತರಿದ್ದರು.
ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ದರ್ಶನ್ ಸ್ವಾಗತಿಸಿದರು.