ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಶ್ರಮಿಸಿ: ಚಂದ್ರಶೇಖರ್
ನರಸಿಂಹರಾಜಪುರ: ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿದರೆ ನಿಧಾನವಾಗಿ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಸಾಧ್ಯ ಎಂದು ಕಡಹಿನಬೈಲು ಗ್ರಾಮ ಪಂಚಾಯ್ತಿ ಅಧ್ಯಕ್ಷ ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಅವರು ಮಂಗಳವಾರ ಶೆಟ್ಟಿಕೊಪ್ಪದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಪ್ರತಿಧ್ವನಿ ಸಂಸ್ಥೆಯ ವತಿಯಿಂದ ನಡೆದ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅತಿಥಿಯಾಗಿದ್ದ ಶೆಟ್ಟಿಕೊಪ್ಪ ಶಾಲೆಯ ಮುಖ್ಯೋಪಾಧ್ಯಾಯ ಪುಟ್ಟಪ್ಪ ಮಾತನಾಡಿ, ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಮಾಡಬೇಕು ಎಂಬ ಸದುದ್ದೇಶದಿಂದ ಕಾಲೇಜು ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಕಾರ್ಯಕ್ರಮವು ಉಪಯುಕ್ತವಾಗಿದೆ ಎಂದರು.
ಪ್ರತಿಧ್ವನಿ ಸಂಸ್ಥೆಯ ಅಧ್ಯಕ್ಷ ಎಂ.ಪಿ. ಪ್ರದೀಪ್ ಮಾತನಾಡಿ, ಪ್ಲಾಸ್ಟಿಕ್ಬ್‌ಳಕೆಯನ್ನು ಕಡಿಮೆ ಮಾಡಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.ಪ್ರತಿಧ್ವನಿ ಸಂಸ್ಥೆಯ ಸದಸ್ಯೆ ಅಂಚನ ಎಲ್ದೋ ಮಾತನಾಡಿ, ಕಾರ್ಯಕ್ರಮದ ಉದ್ದೇಶದ ಬಗ್ಗೆ ವಿವರಿಸಿದರು. ವಿದ್ಯಾರ್ಥಿ ಕೆ.ಟಿ. ಮನೋಜ್ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯರಾಂ, ದೈಹಿಕ ಶಿಕ್ಷಕಿ ರೇಖಾ, ವಿಜ್ಞಾನ ಶಿಕ್ಷಕ ಓಂಕಾರಪ್ಪ ಉಪಸ್ಥಿತರಿದ್ದರು.