ಇಂದು ಕಾನೂನು ಅರಿವು ಕಾರ್ಯಕ್ರಮ
ಚಿಕ್ಕಮಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಾರ್ತಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆ. 13 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ್ ಎ. ಪಾಟೀಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಅಫ್ತಾಬ್ ಅಹಮದ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಆರ್. ವೆಂಕಟೇಶ್ ಭಾಗವಹಿಸಲಿದ್ದಾರೆ.
ವಕೀಲರಾದ ಎಚ್.ಸಿ. ನಟರಾಜ್, ಮಹಿಳೆ ಮತ್ತು ಮಕ್ಕಳ ಸಂರಕ್ಷಣೆ ಎಂಬ ವಿಷಯದ ಬಗ್ಗೆ ಹಾಗೂ ಕೆ.ಎಸ್. ಚಂದ್ರಶೇಖರ್ ಅವರು ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಎಂಬ ವಿಷಯದ ಬಗ್ಗೆ ಉಪನ್ಯಾಸವನ್ನು ಅವರು ನೀಡಲಿದ್ದಾರೆ.
ಮುಖ್ಯಮಂತ್ರಿ ಹುಟ್ಟುಹಬ್ಬಆಚರಣೆ
ಚಿಕ್ಕಮಗಳೂರು: ಸಿದ್ದರಾಮಯ್ಯನವರ ಅಭಿಮಾನಿಗಳ ಸಂಘ ಹಾಗೂ ತಾಲೂಕು ಕುರುಬರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರ 66ನೇ ಹುಟ್ಟುಹಬ್ಬವನ್ನು ಚಿಕ್ಕಮಗಳೂರಿನಲ್ಲಿ ಸೋಮವಾರ ಆಚರಿಸಲಾಯಿತು.
ಬೆಳಿಗ್ಗೆ 10 ಗಂಟೆಗೆ ಚಿಕ್ಕಮಗಳೂರಿನ ಹಳೆ ತಾಲ್ಲೂಕು ಕಚೇರಿ ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಉತ್ತಮ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದು ಅವರಿಗೆ ಭಗವಂತನು ಇನ್ನು ಹೆಚ್ಚಿನ ಶಕ್ತಿ ನೀಡಲೆಂದು ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ, ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ, ಎ.ಎನ್. ಮಹೇಶ್, ಕೆ. ಮಹಮದ್, ಕೆ.ಎಸ್. ಶಾಂತೇಗೌಡ, ಡಾ. ವಿಜಯಕುಮಾರ್, ಚಂದ್ರೇಗೌಡ, ಸಂದೀಪ್, ಡಿ.ಸಿ. ಪುಟ್ಟೇಗೌಡ, ಭದ್ರೇಗೌಡ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.
ನಂತರ ಹನುಮಂತಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ವಿತರಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ನೇತೃತ್ವದಲ್ಲಿ ಸಿದ್ದರಾಮಯ್ಯ ಅಭಿಮಾನಿ ಸಂಘದ ಅಧ್ಯಕ್ಷ ಸಂದೀಪ್, ತಾಲೂಕು ಕುರುಬರ ಸಂಘದ ಕಾರ್ಯದರ್ಶಿ ಪುಟ್ಟೇಗೌಡ, ಲಕ್ಷ್ಮಣಗೌಡ, ದಿಲೀಪ್, ಅಂಬಳೆ ಗ್ರಾಪಂ ಸದಸ್ಯ ದೊಡ್ಡೇಗೌಡ , ಜಗದೀಶ್, ಹೊಯ್ಸಳ, ಹಂಪಾಪುರ ಮಂಜೇಗೌಡ ಸೇರಿದಂತೆ 26 ಯುವಕರು ರಕ್ತದಾನ ಮಾಡಿದರು.