ಮಾಹಿತಿ ನೀಡುವುದು ಕರ್ತವ್ಯ
ಕಪ್ರ ವಾರ್ತೆಚಿಕ್ಕಮಗಳೂರು ಆ.12
ಸಭೆಗೆ ಸಮಗ್ರ ಮಾಹಿತಿ ನೀಡುವುದು ಅಧಿಕಾರಿಗಳ ಮುಖ್ಯ ಕರ್ತವ್ಯ. ಸರಿಯಾದ ಮಾಹಿತಿ ನೀಡದಿದ್ದರೆ ಕ್ರಮ ಕೈಗೊಳ್ಳಲಾಗುವುದೆಂದು ಶಾಸಕ ಸಿ.ಟಿ. ರವಿ ಹೇಳಿದ್ದಾರೆ.
ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಚಿಕ್ಕಮಗಳೂರು ತಾಪಂ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರ ಮಾತನಾಡಿದರು.
ಸರ್ಕಾರದಿಂದ ನೀಡಿರುವ ನಿಯಮಗಳ ಪಾಲನೆಯೊಂದಿಗೆ ಅಂಕಿ ಅಂಶಗಳನ್ನೊಳಗೊಂಡ ಸಮರ್ಪಕ ಮಾಹಿತಿಯನ್ನು ಸಭೆಗೆ ನೀಡುವುದು ನಿಮ್ಮ ಮುಖ್ಯ ಕರ್ತವ್ಯವಾಗಿದೆ. ಮುಂದಿನ ದಿನಗಳಲ್ಲಿ ಸಮರ್ಪಕವಾದ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು ತಪ್ಪಿದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಸಿಗುವ ಸರ್ಕಾರದ ಸೌಲಭ್ಯಗಳನ್ನು ಫಲಾನುಭವಿಗಳನ್ನು ಗುರುತಿಸಿ ನೀಡಬೇಕು, ತಪ್ಪಿದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದರು.
ಕಪ್ಪು ಪಟ್ಟಿಗೆ ಸೇರಿಸಬೇಕು: ಶೃಂಗೇರಿ ಕ್ಷೇತ್ರದ ಶಾಸಕ ಡಿ.ಎನ್. ಜೀವರಾಜ್ ಮಾತನಾಡಿ, ಕಾಮಗಾರಿಗಳು ಗುಣಮಟ್ಟದೊಂದಿಗೆ ನಿಗಧಿತ ಸಮಯದಲ್ಲಿ ಪೂರ್ಣಗೊಳ್ಳಬೇಕು. ಕಾಮಗಾರಿಗಳು ಕಳಪೆ ಹಾಗೂ ನಿಗಧಿತ ಸಮಯದಲ್ಲಿ ಪೂರ್ಣಗೊಳಿಸದಿದ್ದಲ್ಲಿ ಸಂಬಂಧಪಟ್ಟ ಗುತ್ತಿಗೆದಾರನಿಗೆ ನೋಟಿಸು ನೀಡಿ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಸೂಚನೆ ನೀಡಿದರು.
ಖಾಂಡ್ಯ ಭಾಗದಲ್ಲಿ ವೈಯಕ್ತಿಕ ಕೆಲಸಗಳಿಗೆ ಸರ್ಕಾರದ ಅನುದಾನ ಬಳಕೆ ಮಾಡಿರುವ ಬಗ್ಗೆ ದೂರು ಕೇಳಿ ಬಂದಿದ್ದು, ಈ ಬಗ್ಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ವರದಿ ನೀಡಬೇಕೆಂದು ಸೂಚಿಸಿದರು.
ಮೂಲ ಸೌಕರ್ಯಗಳ ಅಭಿವೃದ್ಧಿ: ವಿವಿಧ ಇಲಾಖಾ ಅಧಿಕಾರಿಗಳ ಸಮನ್ವಯದ ಕೊರತೆಯಿಂದಾಗಿ ಕಾಮಗಾರಿಗಳ ಅನುಷ್ಠಾನ ಹಿಂದೆ ಬಿದ್ದಿರುವುದು ಕಂಡುಬರುತ್ತದೆ, ಸಾರ್ವಜನಿಕರು ಜನಪ್ರತಿನಿಧಿಗಳನ್ನು ಪ್ರಶ್ನಿಸುತ್ತಾರೆ.
ಈ ಬಗ್ಗೆ ಅಧಿಕಾರಿಗಳು ಎಚ್ಚರದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಸರ್ಕಾರ ನೀಡಿರುವ ಅನುದಾನಗಳು ಸಮರ್ಪಕ ಬಳಕೆಯಾಗಬೇಕು ಎಂದು ಹೇಳಿದರು.
ಮಳೆಯಿಂದಾಗಿ ಕದ್ರಿಮಿದ್ರಿಯ ಹಿರೇಕೆರೆ ರಸ್ತೆ ಹಾಳಾಗಿದ್ದು, ಏರಿ ಓಡಿದು ನೀರು ಪೋಲಾದರೆ ಈ ಭಾಗದ ಕೃಷಿಕರಿಗೆ ತೊಂದರೆಯಾಗಲಿದೆ. ಶೀಘ್ರದಲ್ಲಿಯೇ ರೈತರ ಕೃಷಿ ಚಟುವಟಿಕೆಗೆ ತೊಂದರೆ ಆಗದಂತೆ ಕಾಮಗಾರಿಯನ್ನು ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೂಡಿಗೆರೆ ಕ್ಷೇತ್ರದ ಶಾಸಕ ಬಿ.ಬಿ. ನಿಂಗಯ್ಯ ಮಾತನಾಡಿ, ಬಡವರಿಗೆ ಮನೆಗಳನ್ನು ಕಟ್ಟಿಕೊಳ್ಳಲು ನಿವೇಶನಗಳಿಲ್ಲ. ಇದರಿಂದಾಗಿ ತುಂಬಾ ತೊಂದರೆಯಾಗುತ್ತಿದೆ. ಅಧಿಕಾರಿಗಳು ನಿವೇಶನ ರಹಿತರನ್ನು ಗುರುತಿಸಿ ಅವರಿಗೆ ಶೀಘ್ರ ಜಾಗ ನೀಡುವ ಕೆಲಸ ಮಾಡಬೇಕು ಎಂದರು.
ಸಭೆಯಲ್ಲಿ ತಾಪಂ ಅಧ್ಯಕ್ಷ ಬಸವರಾಜ್, ಉಪಧ್ಯಾಕ್ಷ ಪುಟ್ಟೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಧರ್ಮಯ್ಯ, ಜಿಪಂ ಸದಸ್ಯ ನಿರಂಜನ್, ತಾಪಂ ಕಾರ್ಯನಿರ್ವಹಕಾಧಿಕಾರಿ ಮೃತ್ಯುಂಜಯ ಹಾಗೂ ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.