11ರಂದು ವಿದ್ಯಾಗಣಪತಿ ದೇವಾಲಯ ಉದ್ಘಾಟನೆ
ಚಿಕ್ಕಮಗಳೂರು: ನಗರದ ವಿಶ್ವವಿದ್ಯಾಲಯ ವಿದ್ಯಾಸಂಸ್ಥೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಬಲಮುರಿ ಸಂಕಷ್ಟಹರ ವಿದ್ಯಾಗಣಪತಿ ದೇವಾಲಯದ ಉದ್ಘಾಟನಾ ಸಮಾರಂಭ ಡಿ.11 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ಆದಿಚುಂಚನಗಿರಿ ಮಹಾ ಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನೂತನ ದೇವಾಲಯವನ್ನು ಲೋಕಾರ್ಪಣೆ ಮಾಡಲಿದ್ದು, ಶ್ರೀ ಅನ್ನಪೂರ್ಣೇಶ್ವರಿ ಪಾಕಶಾಲೆಯನ್ನು ಲೋಕಸಭಾ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ, ಸೈಕಲ್ ಸ್ಟ್ಯಾಂಡ್ ಶಾಸಕ ಸಿ.ಟಿ. ರವಿ, ನೂತನ ಗ್ರಂಥಾಲಯವನ್ನು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಉದ್ಘಾಟಿಸಲಿದ್ದಾರೆ.
ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾರ್ಯಕ್ಕೆ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಭೂಮಿಪೂಜೆ ನೆರವೇರಿಸಲಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ನಾಮಫಲಕವನ್ನು ಅನಾವರಣಗೊಳಿಸಲಿದ್ದಾರೆ. ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದು, ಸಂಸ್ಥೆಯ ಅಧ್ಯಕ್ಷ ಎಂ.ಎಸ್. ನಂಜುಂಡಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ರಕ್ಷಣಾಧಿಕಾರಿ ಅಭಿಷೇಕ್ ಗೋಯಲ್, ಆಶಾಕಿರಣ ಅಂಧಮಕ್ಕಳ ಶಾಲೆಯ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ಕಾಫಿ ಬೆಳೆಗಾರರಾದ ಎಂ.ಆರ್. ಗುರುಮೂರ್ತಿ, ಎಂ.ಆರ್. ಸಣ್ಣಸಿದ್ದೇಗೌಡ, ಗೌರಮ್ಮ ಬಸವೇಗೌಡ, ಗಂಧದ ಕೃಷ್ಣೇಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಹೆಚ್.ಎಸ್. ರಾಮಚಂದ್ರ ತಿಳಿಸಿದ್ದಾರೆ.
ವಿಕಸನ ಶಿಬಿರ
ಬಾಳೆಹೊನ್ನೂರು: ಸಮೀಪದ ಸೀಗೋಡಿನ ಜವಾಹರ್ ನವೋದಯ ವಿದ್ಯಾಲಯದ ಆವರಣದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಇಗ್ನೈಟ್ ವತಿಯಿಂದ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿಪರ ಮಾರ್ಗದರ್ಶನ ಶಿಬಿರ ಇತ್ತೀಚೆಗೆ ನಡೆಯಿತು.
ನವೋದಯ ವಿದ್ಯಾಲಯದಲ್ಲಿ ವ್ಯಾಸಂಗ ನಡೆಸಿ ಇದೀಗ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಗಣಕ ತಜ್ಞರು, ಸಂಶೋಧಕರು, ಕೃಷಿಕರು ಕಾರ್ಯಾಗಾರದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು. ವಿದ್ಯಾಲಯದ ಪ್ರಾಚಾರ್ಯ ಕೆ. ರಾಮೀರೆಡ್ಡಿ ಕಾರ್ಯಾಗಾರ ಉದ್ಘಾಟಿಸಿದರು.