ಭ್ರಷ್ಟಾಚಾರ ವಿರುದ್ಧ ಹೋರಾಟಕ್ಕೆ ಮತದಾರ ಮನ್ನಣೆ
ಚಿಕ್ಕಮಗಳೂರು: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುವ ಮೂಲಕ ಅದರ ಸಂಸ್ಥಾಪಕ ಅರವಿಂದ್ ಕ್ರೇಜಿವಾಲ್ ಅವರ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಅಲ್ಲಿನ ಜನತೆ ಜಯ ದೊರಕಿಸಿಕೊಟ್ಟಿದ್ದಾರೆ ಎಂದು ಪಕ್ಷದ ಜಿಲ್ಲಾ ಸಂಚಾಲಕ ಡಾ. ಕೆ. ಸುಂದರಗೌಡ ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ವೇಳೆ ಪ್ರಾಮಾಣಿಕ ರಾಜಕಾರಣಕ್ಕೆ ಜನತೆ ಮನ್ನಣೆ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಷ್ಟ್ರ ಮತ್ತು ರಾಜ್ಯಕ್ಕೆ ದೆಹಲಿ ಚುನಾವಣೆ ಮಾದರಿಯಾಗುವುದರ ಜೊತೆಗೆ ದಿಕ್ಸೂಚಿಯಾಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಣ, ಜಾತಿ ಬಲವಿಲ್ಲದೇ ಎಲ್ಲಾ ವರ್ಗದ ಜನರು ಆಮ್ ಆದ್ಮಿ ಪಕ್ಷದ ಸಿದ್ಧಾಂತವನ್ನು ಈ ಚುನಾವಣೆ ಯಲ್ಲಿ ಒಪ್ಪಿಕೊಂಡಿದ್ದಾರೆ. ಪ್ರಮುಖವಾಗಿ ಯುವಜನತೆ ಅರವಿಂದ್ ಕ್ರೇಜಿವಾಲ್ ಅವರ ಕೈಬಲಪಡಿಸುವ ಮೂಲಕ ಭ್ರಷ್ಟ ರಾಜಕಾರಣಿಗಳಿಗೆ ತಕ್ಕಪಾಠ ಕಲಿಸಿದೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಜಯಗಳಿಸಿರುವ ಪಕ್ಷದ ಎಲ್ಲಾ ಶಾಸಕರಿಗೂ ಜಿಲ್ಲಾ ಘಟಕ ಅಭಿನಂದಿಸುತ್ತದೆ ಮತ್ತು ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತದೆ ಎಂದಿರುವ ಅವರು, ಮುಂಬರುವ ಚುನಾವಣೆಗಳಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳು ಇದೇ ರೀತಿ ಪಕ್ಷದ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.