'ಗ್ರಾಮೀಣ ಕಲೆ ಪ್ರೋತ್ಸಾಹಿಸಿ'
ಕ.ಪ್ರ.ವಾರ್ತೆ ಬಾಳೆಹೊನ್ನೂರು ಡಿ.14
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ ಆಗಲಿದೆ ಎಂದು ಬನ್ನೂರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಎನ್. ಹರೀಶ್ ಹೇಳಿದ್ದಾರೆ.
ಇಲ್ಲಿಗೆ ಸಮೀಪದ ಬನ್ನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದ ಕ್ಲಸ್ಟರ್‌ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಸೊಗಡು ನಶಿಸುತ್ತಿವೆ. ಗ್ರಾಮೀಣ ಕಲೆಗಳು ಉಳಿಯಬೇಕಾದರೆ ಇಂತಹ ಕಾರ್ಯಕ್ರಮಗಳು ನಡೆದಾಗ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅನುಕೂಲವಾಗುತ್ತದೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದು ಪೋಷಕರು ಹಾಗೂ ಶಾಲೆಗೆ ಕೀರ್ತಿ ತರಬೇಕು ಎಂದರು.
ಶಾಲೆಯ ಮುಖ್ಯೋಪಾಧ್ಯಾಯ ಕೃಷ್ಣಪ್ಪ ಮಾತನಾಡಿ, ಯುವ ಜನಾಂಗ ಮೊಬೈಲ್ ಹಾಗೂ ದೃಶ್ಯ ಮಾಧ್ಯಮಕ್ಕೆ ಹೆಚ್ಚು ಒತ್ತುಕೊಡದೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕು ಎಂದು ಕರೆ ನೀಡಿದರು.
ಬನ್ನೂರು ಗ್ರಾಪಂ ಅಧ್ಯಕ್ಷೆ ಹೇಮಾವತಿ ಅಧ್ಯಕ್ಷತೆ ವಹಿಸಿದ್ದರು.
ಸದಸ್ಯರಾದ ಹುಣಸೆಕೆರೆ ರವಿ, ಹಡ್ಲುಗದ್ದೆ ಪ್ರಶಾಂತ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಾಜಪ್ಪ, ರೇವಣಸಿದ್ದಪ್ಪ, ದೈಹಿಕ ಶಿಕ್ಷಕರಾದ ಎಸ್.ಎಚ್. ಶಿವಪ್ಪ, ಶಿಕ್ಷಕಿ ಎವಲಿನ್ ಉಪಸ್ಥಿತರಿದ್ದರು.
ಬಾಳೆಹೊನ್ನೂರು ಸಮೀಪದ ಬನ್ನೂರಿನಲ್ಲಿ ಪ್ರತಿಭಾ ಕಾರಂಜಿಯನ್ನು ಬಿ.ಎನ್.ಹರೀಶ್ ಉದ್ಘಾಟಿಸಿದರು.