ಎಚ್ಐವಿ ಪೀಡಿತರಿಗೆ ತೊಂದ್ರೆ ನೀಡಿದ್ರೆ ದಂಡ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಡಿ.17
ಎಚ್ಐವಿ ಪೀಡಿತರಿಗೆ ತೊಂದರೆಯುಂಟು ಮಾಡುವವರಿಗೆ ದಂಡ ವಿಧಿಸುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಸ್. ಕಮಲ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಜಿಲ್ಲಾ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಾಗೃತಿ ಮೂಡಿಸಿ: ಎಚ್ಐವಿ ಪೀಡಿತರ ಬಗ್ಗೆ ಸಮಾಜದಲ್ಲಿರುವ ತಾರತಮ್ಯ ಹೋಗಲಾಡಿಸಿ ಎಚ್ಐವಿ ಸೋಂಕು ಹೊಂದಿರುವ ವ್ಯಕ್ತಿಗಳನ್ನು ಪ್ರೀತಿಯಿಂದ ಕಾಣಬೇಕು, ಸಮಾಜದಲ್ಲಿ ಅವರು ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕೆಂದು ತಿಳಿಸಬೇಕು ಎಂದ ಅವರು, ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಎಚ್ಐವಿ ಸೋಂಕು ಹರಡುವುದನ್ನು ಕಡಿಮೆ ಮಾಡಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಆಯ್ದ 60 ಗ್ರಾಮಗಳಲ್ಲಿ ಎಚ್ಐವಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಲಾ ತಂಡದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ನಗಾರಿ ಭಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಅಧಿಕಾರಿಗಳು ಜನರಲ್ಲಿ ಪ್ರಮುಖವಾಗಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡುವಂತೆ ಅರಿವು ಮೂಡಿಸಬೇಕಾಗಿದೆ ಎಂದು ಹೇಳಿದರು.
ಎಚ್ಐವಿ ಸೋಂಕು ಮತ್ತು ಇನ್ನಿತರ ರೋಗಗಳ ಹರಡುವಿಕೆಗೆ ನಮ್ಮಲ್ಲಿನ ಜ್ಞಾನದ ಕೊರತೆ ಕಾರಣ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡುತ್ತಾರೆ ಎಂದು ಹೇಳಿದ ಅವರು, ಎಚ್ಐವಿ ಸೋಂಕಿತರನ್ನು ಪ್ರೀತಿಯಿಂದ ಕಾಣಬೇಕು. ಅವರಿಗೆ ಎಲ್ಲಾ ಸವಲತ್ತುಗಳನ್ನು ನೀಡಬೇಕಲ್ಲದೆ ಸಮಾಜದಲ್ಲಿ ಅವರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಅವರು ಸೈಕಲ್ ಜಾಥಾ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ಸಂಯಮದಿಂದ ಜೀವನ ನಡೆಸುವುದು, ಬ್ರಹ್ಮಚರ್ಯ ಕ್ರಮ ಅನುಸರಿಸುವುದಲ್ಲದೆ, ಸಮಾಜದಲ್ಲಿ ಎಚ್ಐವಿ ಕುರಿತು ಅಧಿಕಾರಿಗಳು ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತೀರ್ಥನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, 2009ರ ನ್ಯಾಕೋ ಅಂಕಿ ಅಂಶದ ಪ್ರಕಾರ ಭಾರತದಲ್ಲಿ ಶೇ.24ರಷ್ಟು ಜನರು ಎಚ್ಐವಿ ಸೋಂಕಿನಿಂದ ಬಳಲುತ್ತಿದ್ದು, ಕರ್ನಾಟಕದಲ್ಲಿ ಶೇ. 0.69 ರಷ್ಟು ಎಚ್ಐವಿ ಪೀಡಿತರಿದ್ದು, ಕರ್ನಾಟಕ 5ನೇ ಸ್ಥಾನದಲ್ಲಿದೆ. ಪ್ರಥಮ ಸ್ಥಾನದಲ್ಲಿ ಮಹಾರಾಷ್ಟ್ರ 2ನೇ ಸ್ಥಾನದಲ್ಲಿ, ಆಂಧ್ರ ಪ್ರದೇಶ ಮೂರನೇ ಸ್ಥಾನದಲ್ಲಿ ಮಿಜೋರಾಂ ಹಾಗೂ ನಾಲ್ಕನೇ ಸ್ಥಾನದಲ್ಲಿ ನಾಗಲ್ಯಾಂಡ್ ಇದೆ ಎಂದು ತಿಳಿಸಿದ ಅವರು, ಪ್ರತಿ ವರ್ಷ ಎಚ್ಐವಿ ಪೀಡಿತರ ಸಂಖ್ಯೆ ಕಡಿಮೆಯಾಗುತ್ತಿದೆ ಇದಕ್ಕೆ ಕಾರಣ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿರುವುದು ಎಂದು ಹೇಳಿದರು.
ಜಿಪಂ ಸಿಇಒ ಪಿ.ಬಿ. ಕರುಣಾಕರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಮಹಾದೇವಯ್ಯ, ಜಿಲ್ಲಾ ಸರ್ಜನ್ ಡಾ. ಆರ್. ದೊಡ್ಡಮಲ್ಲಪ್ಪ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.