ಪತ್ನಿ ಮೇಲೆ ಹಲ್ಲೆ: ಪತಿಗೆ ವರ್ಷ ಜೈಲು
ಚಿಕ್ಕಮಗಳೂರು: ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿ ಮಾನಸಿಕ ಹಿಂಸೆ ನೀಡಿದ ಅಪರಾಧಿಗೆ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ಹಾಗೂ 2 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
2013 ಜನವರಿ 24 ರಂದು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಹಳ್ಳಿಯ ಎರೆಹಳ್ಳದಲ್ಲಿ ಆರೋಪಿ ದೇವರಾಜು ತನ್ನ ಪತ್ನಿ ಸುಮಾಳಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ, ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಅವರು, ಆರೋಪ ಸಾಬೀತಾಗಿದ್ದರಿಂದ ದೇವರಾಜನಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಅಪರಾಧಕ್ಕೆ ಒಂದು ವರ್ಷ ಸಾದಾ ಸಜೆ ಮತ್ತು ಹಲ್ಲೆ ಮಾಡಿದಕ್ಕೆ ಆರು ತಿಂಗಳ ಸದಾ ಸಜೆಯನ್ನು ಮತ್ತು 2 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿ. ರಾಘವೇಂದ್ರ ರಾಯ್ಕರ್ ವಾದಿಸಿದ್ದರು.
--
ಉಚಿತ ಆರೋಗ್ಯ ತಪಾಸಣಾ ಶಿಬಿರ
ಶೃಂಗೇರಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮಂಗಳೂರಿನ ಎನಪೋಯ ಆಸ್ಪತ್ರೆ, ವಾಜಪೇಯಿ ಆರೋಗ್ಯಶ್ರೀ ಯೋಜನೆ, ಸುವರ್ಣ ಸುರಕ್ಷಾ ಯೋಜನೆ, ಸರ್ಕಾರಿ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಶಿಬಿರ ಉದ್ಘಾಟಿಸಿ ಮಾತನಾಡಿದ ತಾಲೂಕು ವೈದ್ಯಾಧಿಕಾರಿ ಡಾ. ವೆಂಕಟೇಶ್ ಮಾತನಾಡಿ, ಉತ್ತಮ ಆರೋಗ್ಯದಿಂದ ಉತ್ತಮ ಜೀವನ ನಡೆಸಲು ಸಾಧ್ಯ. ಆರೋಗ್ಯದ ಬಗ್ಗೆ ಆಗಾಗ ಗಮನ ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಖಾಯಿಲೆಗಳಿಂದ ದೂರವಿರಬಹುದು. ಜನರು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಶಿಬಿರದಲ್ಲಿ ನರರೋಗ,ಮೂತ್ರಪಿಂಡ ಖಾಯಿಲೆ,ಕ್ಯಾನ್ಸರ್,ಮಕ್ಕಳ ಕಾಯಿಲೆಗಳಿಗೆ ಸಂಬಂದಿಸಿದಂತೆ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ನಡೆಸಲಾಯಿತು.ಆರೋಗ್ಯ ತಜ್ಞರು ಪಾಲ್ಗೊಂಡಿದ್ದರು.