ವೇತನ ಪರಿಷ್ಕರಣೆಗೆ ಒತ್ತಾಯಿಸಿ ಪ್ರತಿಭಟನೆ
ಚಿಕ್ಕಮಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬ್ಯಾಂಕ್ ನೌಕರರು ಬುಧವಾರ ಪ್ರತಿಭಟನೆ ನಡೆಸಿದರು.
ಬ್ಯಾಂಕ್ ನೌಕರರ ಸಂಘಟನೆ ಒಕ್ಕೂಟದ ಮೇರೆಗೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ನೌಕರರು ಇಲ್ಲಿನ ಎಸ್‌ಬಿಎಂ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬ್ಯಾಂಕ್ ನೌಕರರ ವೇತನ ಪ್ರತಿ 5 ವರ್ಷಕ್ಕೊಮ್ಮೆ ಪರಿಷ್ಕರಣೆಯಾಗಬೇಕು. 2012ರ ನವೆಂಬರ್‌ನಲ್ಲಿ ಜಾರಿಗೆ ಬರಬೇಕಾಗಿದ್ದ ವೇತನ ಪರಿಷ್ಕರಣೆ ಈವರೆಗೆ ಅನುಷ್ಟಾನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.
ವೇತನ ಪರಿಷ್ಕರಣೆ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ದ್ವಿಪಕ್ಷೀಯ ಒಪ್ಪಂದದಂತೆ ನಡೆದಿರುವ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಈವರೆಗೆ ಜಾರಿಗೆ ಬಂದಿಲ್ಲ ಎಂದು ತಿಳಿಸಿದರು.
ಇದೇ ಸಂದರ್ಭ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಂ. ಸತ್ಯನಾರಾಯಣಸ್ವಾಮಿ ಮಾತನಾಡಿ, ವೇತನ ಪರಿಷ್ಕರಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಕೇಂದ್ರ ಸರ್ಕಾರ ಕೂಡಲೇ ತಮ್ಮ ಬೇಡಿಕೆಯನ್ನು ಈಡೇರಿಸಬೇಕೆಂದು ಆಗ್ರಹಿಸಿದರು. ಸಂಘದ ಅಧ್ಯಕ್ಷ ರಮೇಶ್ ಕುಮಾರ್ ಸೇರಿದಂತೆ ವಿವಿಧ ಬ್ಯಾಂಕ್‌ಗಳ ಸಂಘಟನೆಯ ಪದಾಧಿಕಾರಿಗಳು ಇದ್ದರು.