ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ

Lingaraj Badiger
Updated On : 21 Dec 2013, 11:17 am

ಕ.ಪ್ರ.ವಾರ್ತೆ, ಚಿಕ್ಕಮಗಳೂರು,  ಡಿ.20
ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಅವಶ್ಯಕತೆ ಇರುವ ಬಗ್ಗೆ ಡಿ. 23 ರಂದು ನಡೆಯಲಿರುವ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೀವ್ ಚಾವ್ಲಾ ಹೇಳಿದ್ದಾರೆ.
ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಹಾಲು ಸಂಗ್ರಹ ವ್ಯವಸ್ಥೆ ಇಲ್ಲ: ಜಿಲ್ಲೆಯ 7 ತಾಲೂಕುಗಳಲ್ಲಿ 168 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, ಇವುಗಳಲ್ಲಿ ದಿನಕ್ಕೆ 50,800 ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಹಾಲು ಸಂಗ್ರಹಕ್ಕೆ ಸರಿಯಾದ ವ್ಯವಸ್ಥೆ ಇಲ್ಲದೆ ಇರುವುದರಿಂದ ಹಾಲು ಉತ್ಪಾದಕರಿಗೆ ತುಂಬಾ ತೊಂದರೆಯಾಗುತ್ತಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ ಜನರು ಪುನರ್ವಸತಿಗಾಗಿ ಪರಿಹಾರ ಕೋರಿದ್ದಾರೆ. ಹಾಲಿ ಇರುವ 390 ಕುಟುಂಬಗಳಿಗೆ 131.80 ಕೋಟಿ ರುಪಾಯಿ ಪರಿಹಾರ ನೀಡಬೇಕಾಗಿದ್ದು, ಈ ಹಣವನ್ನು ಮಂಜೂರು ಮಾಡುವಂತೆ ಜಿಲ್ಲಾಡಳಿತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇತ್ತೀಚೆಗೆ 2 ಕೋಟಿ ರುಪಾಯಿ ಮಂಜೂರಾಗಿದೆ ಎಂದರು.
ನೀರು ಪೂರೈಕೆಗೆ ಪ್ರಸ್ತಾವನೆ: ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ 503 ಜನ ವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದ್ದು, ಈ ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 2037.16 ಲಕ್ಷ ರುಪಾಯಿಯ ಅವಶ್ಯಕತೆ ಇರುವ ಬಗ್ಗೆ ಜಿಲ್ಲಾಡಳಿತ ಅಂದಾಜು ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಈ ಬಾರಿ ಅತಿವೃಷ್ಟಿಯಿಂದಾಗಿ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು ಸೇರಿದಂತೆ ಇತರೆ ಆಸ್ತಿಪಾಸ್ತಿಗೆ ಹಾನಿ ಸಂಭವಿಸಿದ್ದು, ರಸ್ತೆ, ಸೇತುವೆಗಳ ದುರಸ್ತಿಗೆ 35 ಕೋಟಿ ರುಪಾಯಿಯನ್ನು ಸರ್ಕಾರಕ್ಕೆ ಕೇಳಲಾಗಿದೆ ಎಂದು ತಿಳಿಸಿದರು.
ಚಿಕ್ಕಮಗಳೂರು ಹಾಗೂ ಕೊಪ್ಪದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲಾಗುತ್ತಿದ್ದು, ಈ ಎರಡು ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಲು 7 ಕೋಟಿ ರುಪಾಯಿ ಬೇಕು. ಆದರೆ, ಸರ್ಕಾರ ಈವರೆಗೆ ಬಿಡುಗಡೆ ಮಾಡಿದ್ದು 35 ಲಕ್ಷ ರುಪಾಯಿ ಮಾತ್ರ.
ಇನ್ನುಳಿದ ಹಣ ಬಿಡುಗಡೆಯಾಗದೆ ಇರುವುದರಿಂದ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ. ಅದುದರಿಂದ ಕೂಡಲೇ ಹಣ ಬಿಡುಗಡೆ ಮಾಡುವಂತೆ ಸರ್ಕಾರದ ಗಮನ ಸೆಳೆಯಲಾಗುವುದು.  ಮೂಡಿಗೆರೆ ಮತ್ತು ತರೀಕೆರೆ ತಾಲೂಕು ಕೇಂದ್ರಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಹೇಳಿದರು.
ಇನಾಂ ಭೂಮಿ ವಿವಾದ: ಕಳಸದ ಇನಾಂ ಭೂಮಿಯ ವಿವಾದಕ್ಕೆ ಸಂಬಂಧಿಸಿದಂತೆ  ಚರ್ಚಿಸಲು ಡಿ. 26 ರಂದು ಬೆಂಗಳೂರಿನಲ್ಲಿ ಅರಣ್ಯ, ಕಂದಾಯ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಯಲಿದ್ದು, ಸಮಸ್ಯೆ ಕುರಿತು ಚರ್ಚಿಸಲಾಗುವುದು ಎಂದರು.
ಸಕಾಲದಲ್ಲಿ ಸಮಯಕ್ಕೆ ಸರಿಯಾಗಿ ಅರ್ಜಿಗಳು ಇತ್ಯರ್ಥ ಪಡಿಸದೆ ಇರುವುದು ಸಭೆಯಲ್ಲಿ ಗಮನಕ್ಕೆ ಬಂದಿದ್ದು, ಅರ್ಜಿ ವಿಲೇವಾರಿಗೆ ತಡ ಮಾಡಿದರೆ ಸಂಬಂಧಿತ ಅರ್ಜಿದಾರರಿಗೆ ದಿನಕ್ಕೆ 20 ರುಪಾಯಿಯಂತೆ ನೀಡುವಂತೆ ಕಾಯ್ದೆಯಲ್ಲಿ ತಿಳಿಸಲಾಗಿದೆ. ಆದರೆ, ಈ ನಿಯಮವನ್ನು ಹಲವು ಇಲಾಖೆಗಳು ಪಾಲನೆ ಮಾಡುತ್ತಿಲ್ಲ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರುಣಾಕರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement