ಸರ್ಕಾರಿ ಶಾಲೆಗಳಿಂದಲೂ ಉತ್ತಮ ಶಿಕ್ಷಣ: ಶ್ಲಾಘನೆ
ನರಸಿಂಹರಾಜಪುರ: ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದೆ ಎಂದು ತಾಪಂ ಅಧ್ಯಕ್ಷ ಜೆ.ಜಿ. ನಾಗರಾಜ್ ತಿಳಿಸಿದರು.
ಶನಿವಾರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 2013- 14ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕ್ಯಾಸೆಟ್ ಸಂಸ್ಕೃತಿಗೆ ಮಾರು ಹೋಗದೆ ತಮ್ಮಲ್ಲಿ ಸುಪ್ತವಾಗಿ ಅಡಗಿರುವ ನೈಜ ಕಲೆ ಪ್ರದರ್ಶನ ಮಾಡಬೇಕು ಎಂದು ಸಲಹೆ ನೀಡಿದರು.
ಅತಿಥಿಯಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ರಮೇಶ್ ಮಾತನಾಡಿ, ಮಕ್ಕಳಿಗೆ ಪಠ್ಯಪುಸ್ತಕದ ಜೊತೆಗೆ ದೈಹಿಕ, ಮಾನಸಿಕ, ಬೌದ್ಧಿಕ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಲು ಅನುಕೂಲವಾಗುವಂತೆ ಕ್ರೀಡಾಕೂಟ, ಸಾಂಸ್ಕೃತಿಕ ಚಟುವಟಿಕೆ, ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳನ್ನು ಶಾಲಾ ಹಂತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಪಪಂ ಸದಸ್ಯ ಅಬ್ದುಲ್ ಸುಬಾನ್ ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರೌಢ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಎಚ್.ಎಸ್. ಕೃಷ್ಣಮೂರ್ತಿ ವಹಿಸಿದ್ದರು. ಅತಿಥಿಗಳಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಡಿ.ರಾಜಪ್ಪ, ಪ್ರೌಢ ಶಾಲಾ ವಿಭಾಗದ ಉಪ ಪ್ರಾಚಾರ್ಯ ಎಂ. ಪ್ರಕಾಶ್, ಎಸ್‌ಡಿಎಂಸಿ ಸದಸ್ಯರಾದ ಉಮಾಸತ್ಯನಾರಾಯಣ್, ತಾಜನ್ನೀಸಾ, ಸುಸೀಲಮ್ಮ ಹೊಸಕೆರೆ, ಕೆ.ಪುಟ್ಟಯ್ಯ, ಚಂದ್ರಪ್ಪ ಮತ್ತಿತರರು ಇದ್ದರು.
ಇದೇ ಸಂದರ್ಭದಲ್ಲಿ ಉತ್ತಮ ರಾಜ್ಯ ಮಟ್ಟದ ಕೃಷಿ ಪ್ರಶಸ್ತಿ ಪಡೆದ ಶಾಲೆಯ ಎಸ್‌ಡಿಎಂಸಿ ಸದಸ್ಯೆ ಉಮಾ ಸತ್ಯನಾರಾಯಣ್ ಅವರನ್ನು ಸನ್ಮಾನಿಸಲಾಯಿತು. ವರ್ಗಾವಣೆಗೊಂಡ ಉಪ ಪ್ರಾಂಶುಪಾಲ ಡಿ.ರಾಜಪ್ಪ ಮತ್ತು ದಾದಾಪೀರ್ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಿಧ ಕ್ರೀಡೆಗಳನ್ನು ಗೆದ್ದ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಂ. ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.