ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಜ.10ರಂದು ಸುವರ್ಣ ಸಂಭ್ರಮ ಕಾರ್ಯಕ್ರಮ

Lingaraj Badiger
Updated On : 28 Dec 2013, 10:49 am

ಬಾಳೆಹೊನ್ನೂರು: ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಬಾಳೆಹೊನ್ನೂರು ವಿದ್ಯಾಸಂಸ್ಥೆಯು (ಬಿಇಎಸ್) ಸ್ಥಾಪನೆಯಾಗಿ ಯಶಸ್ವಿ ಐವತ್ತು ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಜನವರಿ 10 ರಂದು ಸುವರ್ಣ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಬಿ.ಸಿ. ಗೀತಾ ಹೇಳಿದ್ದಾರೆ.
ಇಲ್ಲಿನ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿ, ಸುವರ್ಣ ಸಂಭ್ರಮ ಮಹೋತ್ಸವದ ಅಂಗವಾಗಿ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜ.10ರಂದು ನಡೆಯುವ ಸಮಾರಂಭದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದು, ಸಂಸದ ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಎಂ.ಆರ್. ವೆಂಕಪ್ಪಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ನೂತನ ಕಟ್ಟಡ ಉದ್ಘಾಟಿಸಲಿದ್ದು, ಶಾಸಕ ಡಿ.ಎನ್. ಜೀವರಾಜ್ ಅವರು ಸನ್ಮಾನಿಸಲಿದ್ದಾರೆ. ಸಂಸದೆ ಹಾಗೂ ಚಲನಚಿತ್ರ ನಟಿ ರಮ್ಯಾ ಸುವರ್ಣ ಸಂಭ್ರಮ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ.
ನಂತರ ಉಡುಪಿಯ ಪ್ರಶಾಂತ್ ಗ್ರೂಪ್ ಡ್ಯಾನ್ಸ್ ಅಕಾಡೆಮಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಜ.11ರಂದು ಬಿಇಎಸ್ ಆಂಗ್ಲ ಮಾಧ್ಯಮ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಜ.12ರಂದು ಸಂಸ್ಥೆಯ ಹಳೆಯ ವಿದ್ಯಾರ್ಥಿ ಸಂಘದಿಂದ ಹಳೆಯ ವಿದ್ಯಾರ್ಥಿಗಳಿಗೆ ನಿಧಿಶೋಧ (ಪುರುಷರಿಗೆ), ಥ್ರೋಬಾಲ್, ಮ್ಯೂಸಿಕಲ್ ಚೇರ್ (ಮಹಿಳೆಯರಿಗೆ) ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಳೆಯ ವಿದ್ಯಾರ್ಥಿ ಸಂಘದ ಸಭಾ ಕಾರ್ಯಕ್ರಮವನ್ನು ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಕೆ.ವಿ.ರವೀಂದ್ರನಾಥ್ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಅಬ್ದುಲ್ ವಹೀದ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರ ಸಂಘಗಳ ನಿವೃತ್ತ ಜಂಟಿ ನಿಬಂಧಕ ಎಚ್.ಆರ್. ಕೃಷ್ಣಯ್ಯಗೌಡ, ಉಪನ್ಯಾಸಕಿ ರೇಖಾ ನಾಗರಾಜರಾವ್ ಉಪಸ್ಥಿತರಿರಲಿದ್ದಾರೆ.
ವಿದ್ಯಾಸಂಸ್ಥೆಯ ಅಧ್ಯಕ್ಷ ಎಂ.ಆರ್. ವೆಂಕಪ್ಪಗೌಡ, ಖಜಾಂಚಿ ತ್ರಿವಿಕ್ರಮಭಟ್, ಸದಸ್ಯರಾದ ಅಬ್ದುಲ್ ವಹೀದ್, ಕೆ.ಕೆ. ವೆಂಕಟೇಶ್, ಬಿ.ಎಂ. ಶಿವಣ್ಣಗೌಡ, ಕೆ.ಟಿ. ಸುದೇಶ್, ಪ್ರಾಚಾರ್ಯ ಪುರುಷೋತ್ತಮ್ ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement