ಕೇಂದ್ರ ಅನುದಾನ ಸಮರ್ಪಕವಾಗಿ ಬಳಸಿ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಡಿ. 30
ಕೇಂದ್ರ ಸರ್ಕಾರದ ಪ್ರಾಯೋಜಿತ ಗ್ರಾಮೀಣಾಭಿವೃದ್ಧಿ ಹಾಗೂ ಮತ್ತಿತರೆ ಯೋಜನೆಗಳ ಅನುದಾನದ ಸಮರ್ಪಕ ಬಳಕೆ ಮಾಡಿಕೊಳ್ಳಬೇಕೆಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಮಗಾರಿ ಪೂರ್ಣಗೊಳಿಸಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ 48 ಕೋಟಿ ರು. ಅನುದಾನ ನೀಡಿದ್ದು, ಇದರ ಸಮರ್ಪಕ ಬಳಕೆಯಾಗಬೇಕು. ಈಗಾಗಲೆ ಜಿಲ್ಲೆಯಲ್ಲಿ 9202 ಕಾಮಗಾರಿಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೈಗೊಂಡಿದ್ದು, 409 ಕಾಮಗಾರಿ ಪೂರ್ಣಗೊಂಡಿವೆ. ಪ್ರಗತಿಯಲ್ಲಿರುವ 8753 ಕಾಮಗಾರಿಗಳನ್ನು 9 ಇಲಾಖೆಗಳು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಬೇಕೆಂದರು.
ಮುಂಬರುವ ಬೇಸಿಗೆಯ ದಿನಗಳಲ್ಲಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕಾರ್ಯ ಪ್ರವೃತ್ತರಾಗಬೇಕೆಂದ ಅವರು, ಮೆಸ್ಕಾಂ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸಮನ್ವಯದೊಂದಿಗೆ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದರು.
ಗ್ರಾಮೀಣ ಸೇವೆ ಕಡ್ಡಾಯವಾಗಲಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿಯಲ್ಲಿ 1484.21 ಲಕ್ಷ ಅನುದಾನ ಬಿಡುಗಡೆ ಯಾಗಿದ್ದು, 1226.28 ಲಕ್ಷ ರು. ಬಳಕೆಯಾಗಿದೆ. ಬಾಕಿ ಉಳಿದ ಅನುದಾನವನ್ನು ಬಳಕೆಯಾಗಬೇಕೆಂದ ಅವರು, ಗ್ರಾಮೀಣ ಭಾಗದಲ್ಲಿ ಶೇ. 75 ರಷ್ಟು ವೈದ್ಯರ ಕೊರತೆ ಇದೆ, ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯಗೊಳಿಸುವುದು ಸೂಕ್ತ ಎಂದರು.
ಅಂಬೇಡ್ಕರ್, ಬಸವ ವಸತಿ ಹಾಗೂ ಇಂದಿರಾ ಆವಾಜ್ ಯೋಜನೆಯ ಮನೆಗಳ ಪ್ರಗತಿಯ ಅನುಗುಣವಾಗಿ ಹಣ ಬಿಡುಗಡೆ ಮಾಡಬೇಕೆಂದ ಅವರು, ಅಪೂರ್ಣಗೊಳಿಸಿರುವ ಮನೆಗೆ ಕಾರಣ ನಿವೇಶನ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳಿದ್ದಲ್ಲಿ ಇದರ ಪರಿಹಾರಕ್ಕೆ ತೆಗೆದುಕೊಳ್ಳಬಹುದಾದ ಕ್ರಮದ ವರದಿಗಳನ್ನು ನೀಡಬೇಕು.
ಅರಣ್ಯ ಜಮೀನಿನ ಸಮಸ್ಯೆ ಇರುವ ಕಡೆ ಕಂದಾಯ, ಅರಣ್ಯ ಹಾಗೂ ಪಂಚಾಯತ್ ಇಲಾಖೆಗಳು ಸಮನ್ವಯದೊಂದಿಗೆ ಸಮಸ್ಯೆ ಪರಿಹರಿಸಬೇಕೆಂದರು.
ಖಾತ್ರಿಗೆ ಪ್ರಚಾರದ ಕೊರತೆ: ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಮಾತನಾಡಿ, ಮಲೆನಾಡು ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಪ್ರಚಾರದ ಕೊರತೆ ಇದೆ. ಈ ಭಾಗದಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಮಾತನಾಡಿ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೇ ಇಲಾಖೆ ಸಹಯೋಗದೊಂದಿಗೆ ಉತ್ತಮ ತೋಟಗಾರಿಕಾ ಮೇಳವನ್ನು ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿ.ಪಂ. ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಮುಖ್ಯ ಕಾರ್ಯನಿರ್ವಹಕಾಧಿಕಾರಿ ಪಿ.ಬಿ. ಕುರುಣಾಕರ್ ಉಪಸ್ಥಿತರಿದ್ದರು.