ಪಟ್ಟಣ, ಗ್ರಾಮೀಣ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ತರಬೇತಿ
ಬೀರೂರು: ಪಟ್ಟಣದ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಎಜುಕೇಷನ್ ಅಂಡ್ ಚಾರಿಟಬಲ್ ಟ್ರಸ್ಟ್, ಕೆ. ಚನ್ನವೀರಪ್ಪಯ್ಯ ಚಾರಿಟಬಲ್ ಟ್ರಸ್ಟ್, ಜೇಸಿ ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ಪತ್ರೆ ಕೆ.ಚನ್ನವೀರಪ್ಪಯ್ಯ ಕಲ್ಯಾಣ ಮಂದಿರದಲ್ಲಿ ಪಟ್ಟಣ ಹಾಗೂ ಗ್ರಾಮೀಣ ಭಾಗದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಹೇಗೆ ಎಂಬುದರ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಜಯಣ್ಣ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಮಹತ್ವದ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಕಲಿಕೆಗೆ ಒತ್ತುಕೊಟ್ಟು ಶ್ರದ್ಧೆಯಿಂದ ವ್ಯಾಸಂಗ ಮಾಡಿ ಉತ್ತಮ ಫಲಿತಾಂಶದೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. ಇಂದಿನ ಶೈಕ್ಷಣಿಕ ವಾತಾವರಣದಲ್ಲಿ ಮಕ್ಕಳಿಗೆ ಪರೀಕ್ಷೆ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ಇಂತಹ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟಿನ ಅಧ್ಯಕ್ಷ ರವಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂತಹ ತರಬೇತಿಗಳು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಬಿ.ಎನ್. ಶ್ರೀನಿವಾಸ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರಸಭಾಧ್ಯಕ್ಷ ಕುಮಾರಸ್ವಾಮಿ ವಹಿಸಿದ್ದರು. ಜೇಸಿ ಸಂಸ್ಥೆಯ ರಾಷ್ಟ್ರೀಯ ಮಟ್ಟದ ತರಬೇತುದಾರ ಜೇಸಿ ಚೇತನ್ ರಾಂ, ಪಟ್ಟಣ ಹಾಗೂ ಗ್ರಾಮೀಣ ಭಾಗಗಳಿಂದ 800ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜೇಸಿ ಘಟಕದ ನೂತನ ಅಧ್ಯಕ್ಷ ಎಸ್.ಎನ್. ದರ್ಶನ್ ಉಪಸ್ಥಿತರಿದ್ದರು.