ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣ ವಸ್ತು ಪ್ರದರ್ಶನ ಉದ್ಘಾಟನೆ
ತರೀಕೆರೆ: ಪ್ರತಿ ಶಾಲೆಯೂ ಸಂಶೋಧನಾ ಕೇಂದ್ರವಾಗಬೇಕು ಎಂದು ತರೀಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್.ಪರಮೇಶ್ವರಪ್ಪ ತಿಳಿಸಿದ್ದಾರೆ.
ಅವರು ಸಮೀಪದ ಸೊಕ್ಕೆ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಾಡಾಗಿದ್ದ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣ ವಸ್ತುಪ್ರದರ್ಶನ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.
ಶಿಕ್ಷಣದಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಾಗಬೇಕು, ಮಾನವ ಸಂಪನ್ಮೂಲ ಸದ್ಬಳಕೆಯಾಗಬೇಕು. ಮಕ್ಕಳ ಪ್ರತಿಭೆ ಪುಸ್ತಕಕ್ಕಷ್ಟೇ ಸೀಮಿತವಾಗಬಾರದು. ಮಕ್ಕಳಿಗೆ ಹಿರಿಯರ ಅನುಭವವನ್ನು ತಿಳಿಸಬೇಕು. ಕೃಷಿ ಎನ್ನುವುದು ಹೊರೆಯಲ್ಲ ಅದು ಲಾಭದಾಯಕ ಅನ್ನುವುದನ್ನು ತೋರಿಸಬೇಕು. ಮಕ್ಕಳಿಗೆ ಸ್ವಾವಲಂಬನೆ ಹೇಳಿಕೊಡಬೇಕು ಎಂದರು.
ಗ್ರಾಮದ ಹಿರಿಯರಾದ ರುದ್ರಪ್ಪ ಮಾತನಾಡಿ, ವಸ್ತುಗಳ ಬಳಕೆ ಬಗ್ಗೆ ವಸ್ತುಪ್ರದರ್ಶನದಿಂದ ಹೆಚ್ಚು ಪರಿಣಾಮ ಬೀರುತ್ತದೆ. ವೃತ್ತಿ ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ಅಗತ್ಯ ಎಂದು ತಿಳಿಸಿದರು.
ಸಮಿತಿಗೆ ಕೃತಜ್ಞತೆ: ಶಿಕ್ಷಕ ತಿಪ್ಪೇಶಪ್ಪ ಮಾತನಾಡಿ, ಎಲ್ಲರ ಸಹಕಾರದಿಂದ ಸೊಕ್ಕೆ ಸರ್ಕಾರಿ ಪ್ರೌಢಶಾಲೆ ಪ್ರತಿವರ್ಷ ಉತ್ತಮ ಫಲಿತಾಂಶ ಪಡೆಯುತ್ತಿದೆ. ಶಾಲೆ ಹೆಚ್ಚು ಪ್ರಗತಿ ಸಾಧಿಸುವಲ್ಲಿ ಸಂಪೂರ್ಣ ಸಹಕರಿಸುತ್ತಿರುವ ಗ್ರಾಮಸ್ಥರಿಗೂ, ದಾನಿಗಳಿಗೆ ಮತ್ತು ಶಾಲಾಭಿವೃದ್ಧಿ ಸಮಿತಿಗೆ ಅವರು ಕೃತಜ್ಞತೆ ಸಲ್ಲಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯಲ್ಲಿ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣ ವಸ್ತು ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಿರುವುದು ಎಲ್ಲರಿಗೂ ಸಂತೋಷ ತಂದಿದೆ ಎಂದು ತಿಳಿಸಿದರು.
ಶೇಖರಣ್ಣ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಲಕ್ಷ್ಮಣ್, ರಾಮಚಂದ್ರಪ್ಪ, ಮೋಹನ್ ಮತ್ತಿತರರು ಮಾತನಾಡಿದರು.
ಗ್ರಾಪಂ ಉಪಾಧ್ಯಕ್ಷೆ ಚಿಕ್ಕಮ್ಮ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮಸ್ಥರು, ಶಾಲೆ ಮುಖ್ಯೋಪಾಧ್ಯಾಯರು, ಶಿಕ್ಷಕರು ವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. ತಿಪ್ಪೇಶಪ್ಪ ಕಾರ್ಯಕ್ರಮ ನಿರೂಪಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.