ಯೋಜನೆ ಅನುಷ್ಠಾನ ನಿಗದಿತ ಅವಧಿಯಲ್ಲಿ ಸಾಧಿಸಿ
ಚಿಕ್ಕಮಗಳೂರು: ವಿವಿಧ ಇಲಾಖೆಗಳಿಗೆ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ನಿಗದಿಪಡಿಸಿರುವ ಗುರಿಯನ್ನು ನಿಗಧಿತ ಸಮಯದಲ್ಲಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ಇಲಾಖೆಗಳಲ್ಲಿ ಶೇಕಡಾ ನೂರಕ್ಕೆ ನೂರರಷ್ಟು ಗುರಿ ಸಾಧಿಸಿ ಜಿಲ್ಲೆಯನ್ನು ಪ್ರಗತಿಯತ್ತ ಕೊಂಡೊಯ್ಯಲು ಅಧಿಕಾರಿಗಳು ಮುಂದಾಗಬೇಕು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಸಭೆಗೆ ಪ್ರಗತಿಯ ವರದಿಯನ್ನು ತಪ್ಪದೇ ತರಬೇಕು. ಮಾಹಿತಿ ಇಲ್ಲದೆ ಸಭೆಗೆ ಬರುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದರು.
ಜಿಲ್ಲೆಯಲ್ಲಿ ವಿವಿಧ ಇಲಾಖೆಯಡಿ ನಡೆಯುತ್ತಿರುವ ವಸತಿಯುತ ಹಾಸ್ಟೆಲ್ಗಳಲ್ಲಿ ಬಹಳ ಸಮಸ್ಯೆಗಳಿದೆ. ಈ ಬಗ್ಗೆ ದೂರುಗಳು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು ಸ್ವತಃ ಹಾಸ್ಟೆಲ್ಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದಾಗ ಅಲ್ಲಿ ಹಲವಾರು ಸಮಸ್ಯೆಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ತುರ್ತು ಭೇಟಿ ಮಾಡಿ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ದೂರುಗಳು ಬರದಂತೆ ಎಚ್ಚರ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳನ್ನು ಸೂಚಿಸಿದರು.
ಶಿಕ್ಷಣಕ್ಕೆ ಸಹಾಯಕ: ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶೃಂಗೇರಿ ಶಿವಣ್ಣ ಮಾತನಾಡಿ, ಜಿಲ್ಲೆಯ ಬಹುತೇಕ ಹಾಸ್ಟೆಲ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಸಮಸ್ಯೆಗಳ ಜೊತೆ ಸ್ವಚ್ಛತೆ, ನೀರು, ನೈರ್ಮಲ್ಯದ ಬಗ್ಗೆ ದೂರುಗಳನ್ನು ವಿದ್ಯಾರ್ಥಿಗಳು ಗಮನಕ್ಕೆ ತಂದಿದ್ದಾರೆ. ಅವುಗಳನ್ನು ನಿವಾರಿಸಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ, ಒಳ್ಳೆಯ ವಾತಾವರಣ ನಿರ್ಮಾಣ ಮಾಡಿಕೊಡಲು ಅಧಿಕಾರಿಗಳು ಮುಂದಾಗಬೇಕು. ಉತ್ತಮ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಒಳ್ಳೆಯ ವಾತಾವರಣ ನಿರ್ಮಿಸಿಕೊಟ್ಟಾಗ ಶಿಕ್ಷಣಕ್ಕೆ ಸಹಾಯಕವಾಗಲಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ. ಶಿವಶಂಕರ್ ಮಾತನಾಡಿ, ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ವಿವಿಧ ಇಲಾಖೆ ಪ್ರಗತಿ ಗಮನಿಸಿದ ಅವರು, ಮುಂದಿನ ದಿನಗಳಲ್ಲಿ ಸಂಪೂರ್ಣ ಗುರಿ ಸಾಧಿಸುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಮಾಲಿನಿ ರಾಜಾನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷರು, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಮುಖ್ಯ ಯೋಜನಾಧಿಕಾರಿ ಸುಬ್ಬರಾವ್ ಸ್ವಾಗತಿಸಿ, ವಂದಿಸಿದರು.