'ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಲಿ'
ಚಿಕ್ಕಮಗಳೂರು: ಲೈಂಗಿಕ ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ಬರಬೇಕೆನ್ನುವ ಉದ್ದೇಶದೊಂದಿಗೆ ಅಂತಹವರಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಆ ಸಮುದಾಯದವರು ಯೋಜನೆಗಳ ಸದುಪಯೋಗ ಪಡೆದುಕೊಳ್ಳುವ ಅವಶ್ಯಕತೆ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಸವರಾಜ್ ಎ. ಪಾಟೀಲ್ ಹೇಳಿದ್ದಾರೆ.
ನಗರದ ಕುವೆಂಪು ಕಲಾಮಂದಿರದಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗಾಗಿ ಬುಧವಾರ ಆಯೋಜಿಸಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭೂಮಿಯ ಮೇಲೆ ಪ್ರತಿಯೊಂದು ಜೀವಿಗೂ ಜೀವಿಸುವ ಹಕ್ಕು ಇದೆ. ಲೈಂಗಿಕ ಅಲ್ಪಸಂಖ್ಯಾತರಿಗೂ ಸಾಮಾಜಿಕ ವ್ಯವಸ್ಥೆಯೊಳಗೆ ಕಾರ್ಯನಿರ್ವಹಿಸಲು ಸರ್ಕಾರ ಹಲವು ಅವಕಾಶಗಳನ್ನು ಕಲ್ಪಿಸುತ್ತಿದೆ. ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಮುಂದೆ ಬರುವ ಪ್ರಯತ್ನ ಮಾಡಬೇಕೆಂದು ಸಲಹೆ ನೀಡಿದರು.
ಉಪನ್ಯಾಸ: ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಕೀಲ ಡಿ.ಬಿ. ಸುಜೇಂದ್ರ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಹಾಗೂ ವಕೀಲೆ ಮಮತಾ, 'ದಸ್ತಗಿರಿಯಾದ ಮಹಿಳೆಯ ಹಕ್ಕುಗಳ ಮತ್ತು ದೌರ್ಜನ್ಯಕ್ಕೊಳಗಾದ ಮಹಿಳೆಗೆ ಸರ್ಕಾರದ ಸವಲತ್ತುಗಳು' ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಮಾತನಾಡಿ, ಇಂತಹ ಕಾರ್ಯಕ್ರಮಗಳ ಮೂಲಕ ಲೈಂಗಿಕ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಾಧಿಕಾರದ ಹಾಗೂ ಆಶೋದಯ ಸಮಿತಿ ಕಾರ್ಯ ಪ್ರಶಂಸನಾರ್ಹ ಎಂದು ತಿಳಿಸಿದರು.
ಅತಿಥಿಗಳಾಗಿ ಭಾಗವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಚ್.ಜೆ. ಚಂದ್ರಶೇಖರಯ್ಯ, ಸರ್ಕಾರದಿಂದ ಲೈಂಗಿಕ ಅಲ್ಪಸಂಖ್ಯಾತ ವರ್ಗದವರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಹಿರಿಯ ಸಿವಿಲ್ ನ್ಯಾ. ರೇಣುಕಾ, ವಕೀಲರ ಸಂಘದ ಖಜಾಂಚಿ ಪಿ. ರಮೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ಅನಂತ್, ಆಶೋದಯ ಸಮಿತಿ ಕಾರ್ಯದರ್ಶಿ ಸಾವಿತ್ರಿ, ಎಂ.ಕೆ.ಎಸ್. ಕಾನೂನು ಕಾಲೇಜಿನ ಪ್ರಾಂಶುಪಾಲ ಡಿ. ನಟರಾಜ್, ಜಿಲ್ಲಾ ಏಡ್ಸ್ ರೋಗ ನಿಯಂತ್ರಣದ ಮೇಲ್ವಿಚಾರಕ ಪ್ರಭು, ವಕೀಲ ಡಿ.ಆರ್. ಚರಣ್, ಉಪನ್ಯಾಸಕ ಹನುಮಂತಪ್ಪ ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.