ಉದ್ಯೋಗ ಮಾಹಿತಿ ಸಮ್ಮೇಳನ
ನರಸಿಂಹರಾಜಪುರ: ಇಂದು ಮಾಧ್ಯಮ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗವಕಾಶಗಳಿದ್ದು, ಯುವ ಜನರು ಈ ಬಗ್ಗೆ ಆಸಕ್ತಿ ವಹಿಸಿಬೇಕು ಎಂದು ಕುವೆಂಪು ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಡಾ. ವರ್ಗೀಸ್ ಹುಲಿಕಲ್ ತಿಳಿಸಿದರು.
ಮಂಗಳವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕುವೆಂಪು ವಿಶ್ವ ವಿದ್ಯಾಲಯದ ಉದ್ಯೋಗ ಮಾಹಿತಿ ವಿಭಾಗವು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಉದ್ಯೋಗ ಮಾಹಿತಿ ಸಮ್ಮೇಳನ ಹಾಗೂ ಉದ್ಯೋಗ ಸಾಹಿತ್ಯ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಾಧ್ಯಮ ಕ್ಷೇತ್ರದಲ್ಲಿ ಹಲವು ವ್ಯಕ್ತಿಗಳು ದೊಡ್ಡ ಸಾಧನೆ ಮಾಡಿ ಹೆಸರು ಹಣ ಸಂಪಾದನೆ ಮಾಡಿದ್ದಾರೆ. ಉತ್ತಮ ಸಮಾಜ ನಿರ್ಮಾಣ ಮಾಡಲು ಯುವಕರು ಮಾಧ್ಯಮ ಕ್ಷೇತ್ರಕ್ಕೆ ಬರಬೇಕು ಎಂದು ಸಲಹೆ ನೀಡಿದರು.
ಇಂದಿನ ಸ್ಫರ್ಧಾತ್ಮಕ ಜಗತ್ತಿನಲ್ಲಿ ಎಲ್ಲಾ ಕ್ಷೇತ್ರದಲ್ಲೂ ಅಪರಿಮಿತ ಉದ್ಯೋಗಾವಕಾಶಗಳು ಲಭ್ಯವಿದೆ. ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಉದ್ಯೋಗಕ್ಕೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಕೊಪ್ಪ ಭಾರತೀಯ ಜೀವ ವಿಮಾ ನಿಗಮದ ಆಡಳಿತಾಧಿಕಾರಿ ಬಿ.ಎನ್. ನಾಗರತ್ನ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಪೂರ್ಣೇಶ್ ಮಾತನಾಡಿ, ಪದವಿ ವಿದ್ಯಾರ್ಥಿಗಳು ಉದ್ಯೋಗವಕಾಶದ ಬಗ್ಗೆ ಹೆಚ್ಚು ಮಾಹಿತಿ ಪಡೆದಿರಬೇಕು. ಪ್ರತಿನಿತ್ಯ ದಿನ ಪತ್ರಿಕೆಗಳನ್ನು ಓದುವುದರಿಂದ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ತಿಳಿಯುತ್ತದೆ ಎಂದರು.
ಕುವೆಂಪು ವಿಶ್ವ ವಿದ್ಯಾಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ಉಪ ಮುಖ್ಯ ಮುಖ್ಯಸ್ಥ ವಿ.ಕೆ. ಧನರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟೀಯ ಸೇವಾ ಯೋಜನಾಧಿಕಾರಿ ಕೆ. ಉಮೇಶ್ ಸ್ವಾಗತಿಸಿದರು. ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು.