ಶಿಕ್ಷಣ ವ್ಯಾಪಾರೀಕರಣಕ್ಕೆ ವಿರೋಧ
ಚಿಕ್ಕಮಗಳೂರು: ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸಬಾರದು. ಶಿಕ್ಷಕರು ಮಕ್ಕಳಿಗೆ ಪಠ್ಯದ ಜೊತೆಗೆ ನೈತಿಕ ಶಿಕ್ಷಣವನ್ನು ನೀಡಬೇಕು ಎಂದು ಪುಷ್ಪಗಿರಿ ಮಹಾಸಂಸ್ಥಾನದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.
ನಗರದ ಹೊರವಲಯದ ಎಂ.ಜೆ.ಎಸ್. ಶಾಲೆಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಕಾರ್ಯಾಧ್ಯಕ್ಷ ಬಿ.ಆರ್. ಜಗದೀಶ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಪ್ರತಿವರ್ಷ ಹೆಚ್ಚುತ್ತಿರುವುದರಿಂದ ಹೆಚ್ಚುವರಿ ಕೊಠಡಿ ಹಾಗೂ ಸಮುದಾಯ ಭವನವನ್ನು ಸದ್ಯದಲ್ಲೇ ನಿರ್ಮಿಸಲಾಗುವುದು ಎಂದರು.
ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ವಲಯ ಅರಣ್ಯಾಧಿಕಾರಿ ಎಸ್.ಎಂ. ಶಿವರಾತ್ರೇಶ್ವರ, ಸಹಾಯಕ ಅರಣ್ಯ ಸಂರಕ್ಷಣಾದಿಕಾರಿ ಎಂ. ಶಶಿಧರ್ ಉಪಸ್ಥಿತರಿದ್ದರು.
ಯುವ ಚೇತನ-2013
ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳನ್ನು ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಕಲೆ ಮುಂತಾದ ಚಟುವಟಿಕೆಗಳಲ್ಲೂ ತೊಡಗಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ನಾಗೇಶ್ ಹೇಳಿದ್ದಾರೆ.
ರೋಟರಿ ಕ್ಲಬ್ ನಗರದ ಎಂ.ಎಲ್.ವಿ. ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಯುವ ಚೇತನ- 2013 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರೋಟರಿ ಸಂಸ್ಥೆ ಸಮಾಜ ಮುಖಿ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ ಎಂದರು. ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ನಗರದ ವಿವಿಧ ಶಾಲೆಗಳಿಂದ ಆಗಮಿಸಿದ್ದ ನೂರಾರು ಮಕ್ಕಳು ಕಾರ್ಯಕ್ರಮದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ಕಾರ್ಯಕ್ರಮದ ತೀರ್ಪುಗಾರರಾಗಿ ಸುಮನಾ ಮತ್ತು ಲಲಿತಾ, ಸ್ಮಿತಾ ಇದ್ದರು.