ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮಹಿಳೆಯರಿಗೆ ಶಿಕ್ಷಣ ಅತ್ಯಗತ್ಯ

Lingaraj Badiger
Updated On : 28 Feb 2013, 10:54 am

ಚಿಕ್ಕಮಗಳೂರು: ದೌರ್ಜನ್ಯ ಮತ್ತು ಶೋಷಣೆಗಳಿಂದ ಮುಕ್ತರಾಗಲು ಮಹಿಳೆಯರಿಗೆ ಶಿಕ್ಷಣ ಅತ್ಯಗತ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ನಾಗೇಶ್ ಹೇಳಿದ್ದಾರೆ.
ನಗರದ ಟೌನ್ ಮಹಿಳಾ ಸಮಾಜ ಶಾಲೆಯಲ್ಲಿ ಸೋಮವಾರ ನಡೆದ ವಿದ್ಯಾರ್ಥಿ ಸಂಘಗಳ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಶತಮಾನಗಳಿಂದ ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ನಿಕೃಷ್ಟವಾಗಿ ಕಾಣಲಾಗುತ್ತಿದೆ. ಅವರನ್ನು ಅಡುಗೆ ಮನೆಗೆ ಮಾತ್ರ ಸೀಮಿತಗೊಳಿಸಲಾಗುತ್ತಿದ್ದು ದೌರ್ಜನ್ಯ ಮತ್ತು ಶೋಷಣೆಗಳು ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿವೆ. ಇದಕ್ಕೆ ಮೂಲ ಕಾರಣ ಹೆಣ್ಣು ತನಗೆ ತಾನೇ ಚೌಕಟ್ಟನ್ನು ನಿರ್ಮಿಸಿ ಕೊಂಡಿರುವುದು ಮತ್ತು ಅನಕ್ಷರಸ್ಥಳಾಗಿರುವುದು ಎಂದರು.
ಶಿಕ್ಷಣವಂತರಾಗಿ: ಶಿಕ್ಷಣ ಎನ್ನುವುದು ಒಂದು ಅಸ್ತ್ರವಿದ್ದ ಹಾಗೆ ಎಂದ ಅವರು, ದೌರ್ಜನ್ಯ ಮತ್ತು ಶೋಷಣೆಗಳಿಂದ ಮಹಿಳೆಯರು ಮುಕ್ತರಾಗಬೇಕಾದರೆ ಶಿಕ್ಷಣವಂತರಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷೆ ಡಾ. ಶಾಂತಿ ಶ್ರೀನಿವಾಸ್, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವುದರ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕ್ರೀಡೆಗಳಲ್ಲಿ ಪಾಲ್ಗೊಳ್ಳುವಂತೆ ಮಾಡುವ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಲಾಗುತ್ತಿದೆ ಎಂದರು.
ಮೈಸೂರು ವಿಭಾಗದ ಉತ್ತಮ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಸ್ತಿಗೆ ಪಾತ್ರರಾದ ಹಿನ್ನೆಲೆಯಲ್ಲಿ ಸಂಸ್ಥೆಯ ವತಿಯಿಂದ ಸಮಾರಂಭದಲ್ಲಿ ಎಸ್.ಜಿ. ನಾಗೇಶ್ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಇತ್ತೀಚೆಗೆ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸಂಸ್ಥೆಯ ಕಾರ್ಯದರ್ಶಿ ಗೀತಾ ಮೂರ್ತಿ, ಮುಖ್ಯ ಶಿಕ್ಷಕರಾದ ವಿಕ್ಟರ್ ಫೆಲೆಕ್ಸ್ ಲೋಬೋ, ಅನಿತಾ ನಾಗೇಶ್, ಶಾರದಾ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement