ಶಾಲೆಯಲ್ಲಿ ಅನಿಲ ಸೋರಿಕೆ: ತಪ್ಪಿದ ಅನಾಹುತ
ಚಿಕ್ಕಮಗಳೂರು: ನಗರದ ಐ.ಜಿ. ರಸ್ತೆಯಲ್ಲಿರುವ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸಲು ತಂದಿದ್ದ ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಾಗಿದ್ದು, ತಕ್ಷಣವೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಗುರುವಾರ ಮಧ್ಯಾಹ್ನ ಶಾಲೆಯ ವಿದ್ಯಾರ್ಥಿಗಳಿಗೆ ಬಿಸಿಯೂಟ ತಯಾರಿಸುವ ವೇಳೆಯಲ್ಲಿ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿತು. ಆಗ ಕೂಡಲೇ ಜಾಗೃತರಾದ ಶಿಕ್ಷಕರು, ಆಗ್ನಿಶಾಮಕ ಠಾಣೆಗೆ ದೂರವಾಣಿ ಮೂಲಕ ಕರೆ ಮಾಡಿ ಈ ವಿಷಯ ತಿಳಿಸಿದರು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಿಲಿಂಡರ್ನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿ, ಅನಾಹುತವನ್ನು ತಪ್ಪಿಸಿದರು.