ಮಕ್ಕಳ ಸಾಗಾಣಿಕೆ ಕುರಿತು ಜಾಗೃತಿ ಅಗತ್ಯ
ಚಿಕ್ಕಮಗಳೂರು: ಪ್ರಸ್ತುತ ಭಾರತೀಯ ಸಮಾಜದಲ್ಲಿ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ಅವಿರತವಾಗಿ ನಡೆಯುತ್ತಿದ್ದು, ಇದನ್ನು ತಡೆಗಟ್ಟುವ ದಿಸೆಯಲ್ಲಿ ಜಾಗೃತರಾಗುವುದು ಅವಶ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಸವರಾಜ್ ಎ. ಪಾಟೀಲ್ ಹೇಳಿದ್ದಾರೆ.
ನಗರದ ಸೇಂಟ್ ಜೋಸೆಫರ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ನಡೆದ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಮತ್ತು ಮಕ್ಕಳು ಆಮಿಷಕ್ಕೆ ಬಲಿಯಾಗಿ ಅಥವಾ ಅಪರಿಚಿತರ ಚಿತಾವಣೆಯ ಮೇರೆಗೆ ಸಾಗಾಣಿಕೆಯಂತಹ ದೌರ್ಜನ್ಯಗಳಿಗೆ ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅರಿವು ಪಡೆಯುವುದರೊಂದಿಗೆ ಇತರರಿಗೂ ಈ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರದ ನಿರ್ದೇಶನದನ್ವಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ವಕೀಲರ ಸಂಘ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಬುಧವಾರ ನಗರದ ಹದಿನೆಂಟು ಪ್ರೌಢಶಾಲೆಗಳಲ್ಲಿ ಏಕಕಾಲಕ್ಕೆ ಮಹಿಳೆ ಮತ್ತು ಮಕ್ಕಳ ಸಾಗಾಣಿಕೆ ತಡೆ ಕುರಿತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಈ ದಿಸೆಯಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ತಿಳಿಸಿದರು.
ಮುಖ್ಯೋಪಾಧ್ಯಾಯಿನಿ ಸಿಸಿಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ನಾಗೇಶ್ ಉಪಸ್ಥಿತರಿದ್ದರು.