ನೀರಿಗಾಗಿ ಕಾಂಗ್ರೆಸ್ ಹೋರಾಟ
ಚಿಕ್ಕಮಗಳೂರು: ಬರ ಪರಿಸ್ಥಿತಿ ಹಾಗೂ ಕುಡಿವ ನೀರಿನ ಸಮಸ್ಯೆಗಳ ಬಗ್ಗೆ ಪಕ್ಷದಿಂದ ಹೋರಾಟ ಹಮ್ಮಿಕೊಳ್ಳಲು ಜಿಲ್ಲಾ ಕಾಂಗ್ರೆಸ್ ತೀರ್ಮಾನಿಸಿದೆ. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎಲ್. ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಕುಡಿವ ನೀರಿನ ಸಮಸ್ಯೆಯ ಬಗ್ಗೆ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.
ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗ ಹಾಗೂ ಅಲ್ಪಸಂಖ್ಯಾತರ ಮೇಲೆ ಅಲ್ಲಲ್ಲಿ ದೌರ್ಜನ್ಯಗಳು ನಡೆಯುತ್ತಿದೆ. ಕಾನೂನು ವೈಫಲ್ಯಕ್ಕೆ ಜಿಲ್ಲಾಡಳಿತವೇ ಹೊಣೆ ಎನ್ನುವ ನಿರ್ಣಯ ಕೈಗೊಳ್ಳಲಾಯಿತು.
ಸಾಮರಸ್ಯ ನಡಿಗೆ: ಉಳ್ಳಾಲದಿಂದ ಉಡುಪಿವರೆಗಿನ ಕಾಂಗ್ರೆಸ್ ನಡಿಗೆ ಸಾಮರಸ್ಯದ ಕಡೆಗೆ ಪಾದಯಾತ್ರೆಯಲ್ಲಿ ಪ್ರತಿ ಬ್ಲಾಕ್ನಿಂದ ಅಲ್ಲಿನ ಪಕ್ಷದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ತೀರ್ಮಾನಿಸಲಾಯಿತು.
ಫೆಬ್ರವರಿ ಅಂತ್ಯದೊಳಗೆ ಬೃಹತ್ ಜಿಲ್ಲಾ ಸಮಾವೇಶ ನಡೆಸಲು ತೀರ್ಮಾನಿಸಿ ನಿರ್ಣಯ ಕೈಗೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎ.ಎನ್. ಮಹೇಶ್ ಮತ್ತು ಅವರ ಜೊತೆಯಲ್ಲಿ ಸದಸ್ಯರಾಗಿ ವಿಧಾನಸಭಾ ಕ್ಷೇತ್ರವಾರು ಎಚ್.ಎಂ. ಸತೀಶ್- ಶೃಂಗೇರಿ ವಿಧಾನಸಭಾ ಕ್ಷೇತ್ರ, ರವಿಶ್ಯಾನುಭಾಗ್- ತರೀಕೆರೆ ವಿಧಾನಸಭಾ ಕ್ಷೇತ್ರ, ಚಂದ್ರಮೌಳಿ- ಕಡೂರು ವಿಧಾನಸಭಾ ಕ್ಷೇತ್ರ, ಎ.ಸಿ. ಸುರೇಶ್- ಮೂಡಿಗೆರೆ ವಿಧಾನಸಭಾ ಕ್ಷೇತ್ರ, ಜೇಮ್ಸ್- ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.
ಎಚ್ಚೆತ್ತು ಪ್ರತಿಭಟಿಸಿ: ನಂತರ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜನಪರ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಪ್ರಚಾರದ ಕೊರತೆಯಿಂದ ಜನರಿಗೆ ತಲುಪಿರುವುದಿಲ್ಲ. ಈ ಕಾರ್ಯವನ್ನು ಪ್ರತಿಯೊಬ್ಬ ಕಾರ್ಯಕರ್ತನು ಮಾಡಬೇಕಿದೆ.
ಅದೇ ರೀತಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಜನರ ಬಳಿಗೆ ಕೊಂಡೊಯ್ಯುವ ಅವಶ್ಯಕತೆಯಿದೆ. ಈ ಕುರಿತು ಸ್ಥಳೀಯವಾಗಿ ಆಗುತ್ತಿರುವ ಅನ್ಯಾಯದ ಬಗ್ಗೆ ಕಾರ್ಯಕರ್ತರು ಎಚ್ಚೆತ್ತು ಪ್ರತಿಭಟಿಸುವುದಲ್ಲದೆ ಮಾಧ್ಯಮಕ್ಕೆ ಹೇಳಿಕೆ ನೀಡುವುದರ ಮೂಲಕ ಜನರ ಗಮನ ಸೆಳೆಯಬೇಕು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯಿಂದ ಜಿಲ್ಲೆಯಲ್ಲಿ ಹಲವು ಸಮಸ್ಯೆಗಳು ಉದ್ಭವವಾಗಿದೆ ಎಂದು ಹೇಳಿದರು.
ಕಾರ್ಯಕರ್ತರು ಚಳುವಳಿಯ ಮೂಲಕ ಪ್ರತಿಭಟಿಸಲು ಕರೆ ನೀಡಿದ ಅವರು, ಕುಡಿಯುವ ನೀರು ಸೇರಿದಂತೆ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳಾಗದಿದ್ದು, ಶಾಸಕರು ಬಿಜೆಪಿ- ಕೆಜೆಪಿ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಕಾರ್ಯನಿರ್ವಹಿಸಲಿ ಎಂದರು.
ಹೊಸ ಜವಾಬ್ದಾರಿ: ಅಭಿನಂದನೆ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್, ಪಕ್ಷ ನನಗೆ ಮತ್ತು ನನ್ನ ತಂಡಕ್ಕೆ ಹೊಸ ಜವಾಬ್ದಾರಿ ನೀಡಿದೆ. ಅದಕ್ಕಾಗಿ ಕೆಪಿಸಿಸಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಹಾಗೂ ಎಲ್ಲಾ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಎಲ್. ರಾಮದಾಸ್, ಕೆಪಿಸಿಸಿ ಕಾರ್ಯದರ್ಶಿ ಚಂದ್ರಪ್ಪ, ಮಹಾ ಪ್ರಧಾನ ಕಾರ್ಯದರ್ಶಿ ಕೆ. ಮಹಮ್ಮದ್, ಕೆ.ಎಸ್. ಶಾಂತೇಗೌಡ, ಕೆ.ಎಂ. ಮಂಜುನಾಥ್, ಪಕ್ಷದ ಬ್ಲಾಕ್ ಅಧ್ಯಕ್ಷರು ಹಾಗೂ ಘಟಕಗಳ ಅಧ್ಯಕ್ಷರು ಮತ್ತು ಮುಖಂಡರು ಭಾಗವಹಿಸಿದ್ದರು.