ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ
ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ನಡೆಸುತ್ತಿರುವ ಬಾಳೆಹೊನ್ನೂರಿನ ನವೋದಯ ಶಾಲೆಯ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಇತ್ತೀಚೆಗೆ ಮನವಿ ಸಲ್ಲಿಸಿದರು.
ಶಾಲೆಯ ಪ್ರಾಚಾರ್ಯ ಕೆ. ರಾಮಿರೆಡ್ಡಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಿಬ್ಬಂದಿ, ಕೇಂದ್ರ ಸರ್ಕಾರ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರುವಂತೆ ಹಾಗೂ ಶಿಕ್ಷಕೇತರ ಸಿಬ್ಬಂದಿಗೆ ಶೇ.10 ವಿಶೇಷ ಭತ್ಯೆ ನೀಡುವ ಬೇಡಿಕೆ ಸೇರಿದಂತೆ ಸುಮಾರು 20 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆ.6ರಿಂದ ಅನಿರ್ದಿಷ್ಟ ಅವಧಿ ಮುಷ್ಕರ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಿದರು.
ನವೋದಯ ಶಾಲಾ ಶಿಕ್ಷಕ ಸಂಘದ ಕಾರ್ಯದರ್ಶಿ ರಾಜಶೇಖರ್ ರಾಥೋಡ್, ಶಿಕ್ಷಕರಾದ ಎಂ.ಕೆ. ಮಧುಸೂಧನ್, ಲೋಹಿತ್ ಶೆಟ್ಟಿ, ಸುಜೇಶ್, ಇತರೆ ಸಿಬ್ಬಂದಿ ಹಾಜರಿದ್ದರು.