ಡೆಂಘೀ ನಿಯಂತ್ರಣಕ್ಕೆ ಸೂಚನೆ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜು.5
ಗ್ರಾಮೀಣ ಭಾಗದಲ್ಲಿ ಮಳೆ ಬರುತ್ತಿರುವುದರಿಂದ ಚರಂಡಿ ಮುಚ್ಚಿಹೋಗಿ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಬಸವರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆ ನೀರು ಅಲ್ಲಲ್ಲಿ ನಿಲ್ಲುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ತಾಲೂಕಿನಲ್ಲಿ ಡೆಂಘೀ ಜ್ವರದ ಪ್ರಕರಣಗಳು ಕಾಣಿಸಿಕೊಂಡಿದ್ದು, ಇದರ ನಿಯಂತ್ರಣಕ್ಕೆ ಅಧಿಕಾರಿಗಳು ಮುಂದಾಗಬೇಕು. ಈ ಸಂಬಂಧ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಗ್ರಾಮಗಳಲ್ಲಿ ಸ್ವಚ್ಛತೆ ಇಲ್ಲದ ಕಾರಣ ಡೆಂಘೀ, ಟೈಫಾಯಿಡ್ ನಂತಹ ಮಾರಕ ರೋಗಗಳು ಕಂಡು ಬರುತ್ತವೆ. ಇದರ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹ ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ತಿಳಿಸಿದರು.
ಅನುದಾನ ಬಳಸಿಕೊಳ್ಳಿ: ಮಳೆಗಾಲ ಆರಂಭವಾದರೂ ಕೂಡ ಕೆಲವು ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ.
ಅಗತ್ಯವಿರುವ ಕಡೆಗಳಲ್ಲಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕೆಂದು ಸೂಚನೆ ನೀಡಿದರು. ರೇಷ್ಮೆ ಬೆಳೆ ಬೇಸಾಯಕ್ಕೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ಮತ್ತು ಅನುದಾನ ನೀಡುತ್ತಿದ್ದರೂ ರೈತರು ಮುಂದೆ ಬರುತ್ತಿಲ್ಲ.
ರೇಷ್ಮೆ ಬೆಳೆಯಿಂದ ತಮ್ಮ ಆರ್ಥಿಕತೆ ಹೆಚ್ಚಿಸಿಕೊಳ್ಳುವುದರ ಜೊತೆಗೆ ಸರ್ಕಾರದ ಪ್ರೋತ್ಸಾಹವನ್ನೂ ಸಹ ಪಡೆಯಬಹುದಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಸ್ತ್ರೀ ಶಕ್ತಿ ಭವನಗಳ ನಿರ್ಮಾಣಕ್ಕೆ 25 ಲಕ್ಷ ನೀಡಲಾಗುತ್ತಿದೆ ಎಂದರು.
ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಪುಟ್ಟೇಗೌಡ ಮಾತನಾಡಿ, ಬೀಕನಹಳ್ಳಿ ಗ್ರಾಮದಲ್ಲಿ ಪಿ.ಡಿ.ಓ.ಗಳು ಜವಾಬ್ದಾರಿಯುತವಾಗಿ ಕೆಲಸ ಮಾಡದೆ ಸ್ವಚ್ಛತೆಯನ್ನು ನಿರ್ಲಕ್ಷಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಧರ್ಮಯ್ಯ, ಕಾರ್ಯನಿರ್ವಹಣಾಧಿಕಾರಿ ಮೃತ್ಯುಂಜಯ, ತಾಲೂಕು ಪಂಚಾಯಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.