ಡೆಂಘೀ ನಿಯಂತ್ರಣಕ್ಕೆ ಮುಂದಾಗಲು ಸೂಚನೆ
ಕಪ್ರ ವಾರ್ತೆ, ಚಿಕ್ಕಮಗಳೂರು, ಜು.11
ಜಿಲ್ಲೆಯಲ್ಲಿ ಡೆಂಘೀ ಜ್ವರದಿಂದ ಮರಣಹೊಂದಿರುವ ಪ್ರಕರಣಗಳು ಕಂಡುಬಂದಿದ್ದು, ಡೆಂಘೀ ನಿಯಂತ್ರಣಕ್ಕೆ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕೆಂದು ಜಿಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಸೂಚಿಸಿದ್ದಾರೆ.
ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ಪ್ರದೇಶಾಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಶಂಕಿತ ಡೆಂಘೀ ಪ್ರಕರಣಗಳಲ್ಲಿ 78 ಡೆಂಘೀ ಪ್ರಕರಣಗಳು ದೃಢಪಟ್ಟಿದ್ದು, 3 ಜನ ಮರಣ ಹೊಂದಿದ್ದಾರೆ. ಈ ರೋಗದ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಿ ಡೆಂಘೀ ನಿಯಂತ್ರಣಕ್ಕೆ ಆರೋಗ್ಯಾಧಿಕಾರಿಗಳು, ಸ್ಥಳೀಯ ಸಂಸ್ಥೆ, ಗ್ರಾಪಂ ಹಾಗೂ ಮತ್ತಿತರ ಇಲಾಖೆಗಳ ಸಹಯೋಗದೊಂದಿಗೆ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಬೇಕೆಂದರು.
ವಿದ್ಯುತ್ ಸಂಪರ್ಕ: ಅಂಗನವಾಡಿ ಕೇಂದ್ರಗಳ ಮೂಲ ಸೌಕರ್ಯ ಒಳಗೊಂಡಂತೆ ಕಟ್ಟಡಗಳ ದುರಸ್ತಿಗೆ ಕ್ರಮವಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಕುಡಿಯುವ ನೀರು ಕಾಮಗಾರಿಗಳಿಗೆ ಮೆಸ್ಕಾಂ ಹಾಗೂ ಪಂಚಾಯತ್ ಎಂಜಿನಿಯರಿಂಗ್ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಶೀಘ್ರದಲ್ಲಿ ವಿದ್ಯುತ್ ಸಂಪರ್ಕವನ್ನು ಕಲ್ಪಿಸಬೇಕೆಂದರು.
ಸಮರ್ಪಕ ವಿತರಣೆ: ಜಿಲ್ಲೆಯಲ್ಲಿ ಮಳೆಯ ಪ್ರಮಾಣ, ಬಿತ್ತನೆ, ರಸಗೊಬ್ಬರ ಹಾಗೂ ಔಷಧಿಗಳ ದಾಸ್ತಾನುಗಳ ಬಗ್ಗೆ ಕೃಷಿ ಇಲಾಖಾ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ರೈತರಿಗೆ ಅವಶ್ಯಕತೆಯ ಪೂರಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ವಿತರಣೆಗೆ ಕ್ರಮವಹಿಸಬೇಕೆಂದರು. ರೈತರು ನೀಡುವ ಹಾಲಿಗೆ ಗುಣಮಟ್ಟಕ್ಕೆ ತಕ್ಕಂತೆ ಹಣ ನೀಡಬೇಕೆಂದು ಕೆ.ಎಂ.ಎಫ್ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನಿಗಮ ಮಂಡಳಿಗಳಿಂದ ವಿವಿಧ ಸೌಲಭ್ಯಗಳನ್ನು ನೀಡುವ ಸಂದರ್ಭದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕೆಂದ ಅವರು, ರೇಷ್ಮೆ ಕೃಷಿಗೆ ಉತ್ತೇಜನ ನೀಡಿ ರೇಷ್ಮೆ ಕೃಷಿಯನ್ನು ವಿಸ್ತರಣೆಗೊಳಿಸಬೇಕೆಂದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ. ಶಿವಶಂಕರ್ ಮಾತನಾಡಿ, ವಸತಿ ಯೋಜನೆಗಳಿಗೆ ನೈಜ ಫಲಾನುಭವಿಗಳನ್ನು ಗುರುತಿಸಬೇಕು. ಗಂಗಾಕಲ್ಯಾಣ ಯೋಜನೆಯ ಕಾಮಗಾರಿಗಳಿಗೆ ಮೆಸ್ಕಾಂ ಅಧಿಕಾರಿಗಳು ತ್ವರಿತಗತಿಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮವಹಿಸಬೇಕೆಂದರು
ಜಿಪಂ ಉಪಾಧ್ಯಕ್ಷೆ ಸುಜಾತ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶಿವಣ್ಣ, ಜಿಪಂ ಸದಸ್ಯ ಆನಂದ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.