ಸ್ವಚ್ಛತೆ ಕುರಿತು ಜಾಗೃತಿ ಅಗತ್ಯ: ಮೋಹನ್
ಕ.ಪ್ರ.ವಾರ್ತೆ, ಬಾಳೆಹೊನ್ನೂರು, ಜು.15
ಗ್ರಾಮದ ಸುತ್ತಮುತ್ತಲಿನ ಸ್ವಚ್ಛತಾ ಕಾರ್ಯಗಳು ಸಂಘ ಸಂಸ್ಥೆಗಳು ಹಾಗೂ ಶಾಲಾ ಮಕ್ಕಳಿಗೆ ಮಾತ್ರ ಸೀಮಿತವಾಗದೇ ನಾಗರಿಕ ಸಮುದಾಯ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಬಹುಮುಖ್ಯ ಎಂದು ಮಾಗುಂಡಿ ಗ್ರಾ.ಪಂ. ಅಧ್ಯಕ್ಷ ಮೋಹನ್ ಹೇಳಿದ್ದಾರೆ.
ಸಮೀಪದ ಮಾಗುಂಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಮ್ಮಿಕೊಂಡಿದ್ದ ಮಲೇರಿಯಾ ವಿರೋಧಿ ಮಾಸಾಚಾರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಂಚಾಯಿತಿ ಅಧಿನಿಯಮಗಳನ್ನು ಗ್ರಾಮಸ್ಥರು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಅದರ ಕುರಿತು ಅರಿವು ಮೂಡಿಸಬೇಕು. ಈ ದಿನಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ವಸ್ತುಗಳನ್ನು ಹಾಕುವುದು ಸರ್ವೇ ಸಾಮಾನ್ಯವಾಗಿದ್ದು, ಸಾರ್ವಜನಿಕರು ತಮ್ಮ ಜವಾಬ್ದಾರಿಯನ್ನು ಅರಿತು ಸ್ವಚ್ಛತೆಯನ್ನು ಕಾಪಾಡಬೇಕು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಭಗವಾನ್ ಮಾತನಾಡಿ, ಸೋಕಿಂತ ಅನಾಫಿಲಿಸ್ ಸೊಳ್ಳೆ ಕಚ್ಚಿದ 10 ದಿನಗಳಲ್ಲಿ ಚಳಿ ಜ್ವರ ಕಾಣಿಕೊಂಡಲ್ಲಿ ತುರ್ತಾಗಿ ಆಸ್ಪತ್ರೆಗೆ ಬಂದು ರಕ್ತಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಂಡಲ್ಲಿ ಮಲೇರಿಯಾ ರೋಗವನ್ನು ತಡೆಗಟ್ಟಬಹುದು. ಮಲೇರಿಯಾ ಒಂದು ಮಾರಕವಾಗಿದ್ದು, ಎಚ್ಚರಿಕೆ ವಹಿಸುವುದು ಅನಿವಾರ್ಯ ಎಂದು ತಿಳಿಸಿದರು.
ಕೃಷಿ: ಭೂ ಚೇತನ ಸಹಕಾರಿ
ಬಾಳೆಹೊನ್ನೂರು: ಆಧುನಿಕ ಕೃಷಿ ಪದ್ದತಿಗೆ ಸರ್ಕಾರ ಜಾರಿಗೊಳಿಸಿದ ಭೂಚೇತನ ಯೋಜನೆಯು ಕೃಷಿಕರಿಗೆ ಸಹಕಾರಿಯಾಗಲಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಲೋಕೇಶಪ್ಪ ಹೇಳಿದ್ದಾರೆ. ಕೃಷಿ ಇಲಾಖೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತಾಶ್ರಯದಲ್ಲಿ ಸಮೀಪದ ಆಡುವಳ್ಳಿ ಗ್ರಾ.ಪಂ. ಸಭಾಂಗಣದಲ್ಲಿ ಆಯೋಜಿಸಿದ್ದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರ ಹಲವಾರು ಯೋಜನೆ ಜಾರಿಗೊಳಿಸಿದ್ದು ಸದುಪಯೋಗ ಪಡೆದುಕೊಳ್ಳಬೇಕು ಎಂದರು.