ಜನಸಂಖ್ಯಾ ನಿಯಂತ್ರಣಕ್ಕೆ ಮುಂದಾಗಿ
ಕ.ಪ್ರ.ವಾರ್ತೆ, ನರಸಿಂಹರಾಜಪುರ, ಜು.16
ಪ್ರತಿ ವರ್ಷ ಭಾರತದ ಜನ ಸಂಖ್ಯೆಗೆ 8.40 ಲಕ್ಷ ಜನರು ಹೊಸದಾಗಿ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಲಲಿತ ತಿಳಿಸಿದರು.
ಮೆಣಸೂರು ಗ್ರಾಮದ ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆದ ವಿಶ್ವ ಜನ ಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಅತಿ ಕಡಿಮೆ ವಯಸ್ಸಿನಲ್ಲಿ ಮದುವೆಯಾಗುವುದರಿಂದ ಸಂತಾನೋತ್ಪತ್ತಿಯ ಅವಧಿ ಹೆಚ್ಚಾಗಿ ಕುಟುಂಬದಲ್ಲಿ ಹುಟ್ಟುವ ಮಕ್ಕಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಲಿದೆ.
ಹಾಗಾಗಿ ವಿವಾಹದ ವಯಸ್ಸನ್ನು ಸಾಧ್ಯವಾದಷ್ಟು ಮುಂದೂಡುವುದರಿಂದ ಜನಸಂಖ್ಯೆಯ ನಿಯಂತ್ರಣ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲಿಯೇ ಜನಸಂಖ್ಯೆ ಏರಿಕೆಯಿದಾಗುವ ಪರಿಣಾಮಗಳು ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಹದಿಹರೆಯದವರ ಆರೋಗ್ಯ ಸಮಸ್ಯೆಯ ಬಗ್ಗೆ ಅರಿವು ಮೂಡಿಸಲು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಸ್ನೇಹ ಕ್ಲಿನಿಕ್ ಪ್ರಾರಂಭಿಸಲಾಗಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಅತಿಥಿಯಾಗಿದ್ದ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪದ್ಮ ಮಾತನಾಡಿ, ಆಗಸ್ಟ್ 1 ರಿಂದ ಸುವರ್ಣ ಚೈತನ್ಯ ಕಾರ್ಯಕ್ರಮದಡಿ ಎಲ್ಲ ಮಕ್ಕಳಿಗೂ ಉಚಿತ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.
ಮಕ್ಕಳಲ್ಲಿ ನ್ಯೂನತೆ ಕಂಡು ಬಂದಲ್ಲಿ 2 ಲಕ್ಷ ರುಪಾಯಿ ವರೆಗಿನ ಚಿಕಿತ್ಸೆಯನ್ನು ಸರ್ಕಾರ ಭರಿಸಲಿದೆ. ಎಲ್ಲ ವಿದ್ಯಾರ್ಥಿಗಳು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ರೋಸಿನಾ ಮಾತನಾಡಿ, ಜನಸಂಖ್ಯೆ ನಿಯಂತ್ರಣದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಉಪಯುಕ್ತವಾಗಿದೆ ಎಂದರು.
ನಂತರ ವಿದ್ಯಾರ್ಥಿಗಳು ಸಣ್ಣ ಕುಟಂಬಗಳಿಂದಾಗುವ ಉಪಯೋಗ ಮತ್ತು ದೊಡ್ಡ ಕುಟಂಬಗಳಿಂದಾಗುವ ಅನಾನುಕೂಲಗಳ ಬಗ್ಗೆ ಕಿರು ನಾಟಕ ಪ್ರದರ್ಶಿಸಿದರು.