ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಳ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜು.18
ಸಮಾಜದಲ್ಲಿ ಮಕ್ಕಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಸಂಗತಿಗಳು ದಿನೇ ದಿನೇ ಹೆಚ್ಚುತ್ತಿದ್ದು, ಇಂತಹ ಹೀನಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಸವರಾಜ್ ಎ. ಪಾಟೀಲ್ ಹೇಳಿದರು.
ನಗರದ ರಾಮಕೃಷ್ಣ ವಿದ್ಯಾಸಂಸ್ಥೆ ಆವರಣದಲ್ಲಿ ವಿದ್ಯಾರ್ಥಿಗಳಿಗಾಗಿ ಗುರುವಾರ ಆಯೋಜಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಿನ ಯುವಜನತೆ ಮಾದಕ ವಸ್ತುಗಳಿಗೆ ದಾಸರಾಗುತ್ತಿರುವುದಲ್ಲದೇ, ಇಂತಹ ವಸ್ತುಗಳ ಸೇವನೆಯ ಅಮಲಿನಲ್ಲಿ ಲೈಂಗಿಕ ದೌರ್ಜನ್ಯವೆಸಗುತ್ತಿರುವುದು ವಿಷಾದನೀಯ. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣ ಮಾಡುವುದೇ ಕಾನೂನು ಸೇವಾ ಪ್ರಾಧಿಕಾರಗಳ ಮೂಲ ಉದ್ದೇಶ ಎಂದು ತಿಳಿಸಿದರು.
ರ್ಯಾಗಿಂಗ್ ತೊಡೆದುಹಾಕಿ: ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಮಹದಾಸೆ ಹೊಂದಿ ಶೈಕ್ಷಣಿಕ ಸಂಸ್ಥೆಗಳಿಗೆ ಸೇರುವ ವಿದ್ಯಾರ್ಥಿಗಳು ರ್ಯಾಗಿಂಗ್ಗೆ ಒಳಗಾಗಿ ಜೀವವನ್ನೇ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಸಹ ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟುವ ದಿಸೆಯಲ್ಲಿ ಶೈಕ್ಷಣಿಕ ಸಂಸ್ಥೆಗಳ ಜವಾಬ್ದಾರಿ ಬಹಳ ಮುಖ್ಯವಾಗಿದೆ. ದೌರ್ಜನ್ಯಗಳು ನಡೆಯುತ್ತಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ಮಾಹಿತಿ ತಿಳಿದಾಗ ಅದನ್ನು ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರಿಗೆ, ಆರಕ್ಷಕರಿಗೆ ಅಥವಾ ಯಾವುದೇ ಕಾನೂನು ಸೇವಾ ಪ್ರಾಧಿಕಾರಗಳಿಗೆ ತಿಳಿಸುವ ಮೂಲಕ ರ್ಯಾಗಿಂಗ್ ಪಿಡುಗನ್ನು ಸಮಾಜದಿಂದ ತೊಡೆದುಹಾಕುವ ಕೆಲಸದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು.
ವಕೀಲ ಎಂ. ಗೋಪಿನಾಥ್, ರ್ಯಾಗಿಂಗ್ ತಡೆ ಹಾಗೂ ಮಾದಕ ವಸ್ತು ಮತ್ತು ಲೈಂಗಿಕ ದುರ್ಬಳಕೆಯಿಂದ ಮಕ್ಕಳ ರಕ್ಷಣೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ರಾಮಕೃಷ್ಣ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಂ. ಪಂಕಜ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಸ್.ಬಿ. ವಸ್ತ್ರಮಠ, ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಮಹದೇವಯ್ಯ, ವಕೀಲರ ಸಂಘದ ಅಧ್ಯಕ್ಷ ಅಫ್ತಾಬ್ ಅಹಮದ್, ಕಾರ್ಯದರ್ಶಿ ಐ.ಎಸ್. ತೇಜಸ್ವಿ ಉಪಸ್ಥಿತರಿದ್ದರು.
ಉಪನ್ಯಾಸಕ ಕುಮಾರೇಗೌಡ ಸ್ವಾಗತಿಸಿದರು, ಈಶ್ವರಪ್ಪಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುನೀಲ್ ವಂದಿಸಿದರು.