ವೈದ್ಯರ ನೇಮಿಸಲು ಒತ್ತಾಯ
ಕ.ಪ್ರ.ವಾರ್ತೆ, ಮೂಡಿಗೆರೆ, ಜು.18
ಪಟ್ಟಣದ ಸರ್ಕಾರಿ ಸಾರ್ವಜನಿಕ ಎಂಜಿಎಂ ಆಸ್ಪತ್ರೆಗೆ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಆಟೋ, ವಾಹನ ಚಾಲಕರು- ಮಾಲೀಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ತಾಲೂಕಿನಲ್ಲಿ ಕೂಲಿ ಕಾರ್ಮಿಕರೇ ಅಧಿಕವಾಗಿದ್ದು, ನಕ್ಸಲ್ ಬಾಧಿತ ಪ್ರದೇಶವಾಗಿರುವ ತಾಲೂಕು 2 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಹಾಗಾಗಿ ಹೆಚ್ಚುವರಿ ವೈದ್ಯರನ್ನು ನೇಮಿಸುವಂತೆ ತಕ್ಷಣ ನೇಮಿಸಬೇಕು ಎಂದು ಆಗ್ರಹಿಸಿದರು.
ಹೆಚ್ಚುವರಿ ವೈದ್ಯರನ್ನು ನೇಮಿಸಿ: ಜೈಭೀಮ್ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಯು.ಬಿ. ಮಂಜಯ್ಯ ಮಾತನಾಡಿ, ತಾಲೂಕಾಸ್ಪತ್ರೆ 100 ಹಾಸಿಗೆ ಆಸ್ಪತ್ರೆಯಾಗಿದ್ದು, ಕೇವಲ ಮೂವರು ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ತಾಲೂಕಿನಲ್ಲಿ ಕೇವಲ 5-6 ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು, ಸರ್ಕಾರ ಕೂಡಲೇ ಈ ಆಸ್ಪತ್ರೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳಿಗೂ ವೈದ್ಯರನ್ನು ನೇಮಿಸಬೇಕು. ಮತ್ತು ಸಮರ್ಪಕ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಿ ಈ ಭಾಗದ ಬಡರೋಗಿಗಳಿಗೆ ಅನುಕೂಲ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು. ನಂತರ ಸರ್ಕಾರಿ ಆಸ್ಪತ್ರೆ ಆವರಣದಿಂದ ತಾಲೂಕು ಕಚೇರಿಗೆ ಮೆರವಣಿಗೆ ಮೂಲಕ ತೆರಳಿ ಮನವಿ ಪತ್ರವನ್ನು ತಹಸೀಲ್ದಾರರಿಗೆ ಸಲ್ಲಿಸಿದರು.