ಸ್ವಾತಂತ್ರ್ಯೋತ್ಸವ ಪೂರ್ವ ಸಿದ್ಧತೆಗೆ ಡಿಸಿ ಸೂಚನೆ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜು.23
ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಎಲ್ಲರೂ ಉತ್ಸಾಹದಿಂದ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ವಿ. ಯಶವಂತ್ ಕರೆ ನೀಡಿದ್ದಾರೆ.
ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ಕಾರ್ಯಕ್ರಮ ಆ.15ರಂದು ಬೆಳಗ್ಗೆ 9 ಗಂಟೆಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಪೊಲೀಸ್ ಇಲಾಖೆ, ತಂಡಗಳಿಂದ ಆಕರ್ಷಕ ಪರೇಡ್ ನಡೆಯಲಿದ್ದು, ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮನಮೋಹಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಕಲಾ ಪ್ರದರ್ಶನ: ಸಮಾರಂಭದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಾಗುವುದು. ಅಂದು ಸಂಜೆ ಕುವೆಂಪು ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ರಾಷ್ಟ್ರಪ್ರೇಮ ಬಿಂಬಿಸುವ ಕಲಾ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ವಿವಿಧ ಶಾಲೆಗಳಲ್ಲಿ ದೇಶ ಭಕ್ತಿಯ ಪ್ರಬಂಧ, ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ವಾತಂತ್ರ್ಯ ದಿನದಂದು ಎಲ್ಲಾ ಸರಕಾರಿ ಕಚೇರಿಗಳಲ್ಲೂ ಧ್ವಜಾರೋಹಣ ನೆರವೇರಿಸಬೇಕು ಮತ್ತು ಕಚೇರಿಗಳನ್ನು ದೀಪಾಲಂಕಾರಗೊಳಿಸುವಂತೆ ಅವರು ಸೂಚಿಸಿದರು.
ಜಿಲ್ಲಾಡಳಿತಕ್ಕೆ ಸಹಕರಿಸಿ: ಸ್ವಾತಂತ್ರ್ಯ ದಿನವು ದೇಶದ ಹೋರಾಟಗಾರರನ್ನು ಸ್ಮರಿಸುವ ದಿನವಾಗಿದೆ. ಅದು ರಜಾ ದಿನವಲ್ಲ. ಬದಲಾಗಿ ಆಚರಣಾ ದಿನವಾಗಿದೆ. ಜಿಲ್ಲೆಯ ಸಾರ್ವಜನಿಕರು, ಸಂಘ ಸಂಸ್ಥೆಗಳು ಈ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಇದೇ ಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧತೆಗಳಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್, ಅಪರ ಜಿಲ್ಲಾಧಿಕಾರಿ ಬಾಲಚಂದ್ರ, ಉಪ ವಿಭಾಗಾಧಿಕಾರಿ ಡಾ. ಪ್ರಶಾಂತ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ರಾಜಕೀಯ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.