ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಆ.1ರಂದು ಶಾಲಾ ಮಕ್ಕಳ ಆರೋಗ್ಯ ತಪಾಸಣೆ

Lingaraj Badiger
Updated On : 26 Jul 2013, 11:38 am

ಕ.ಪ್ರ.ವಾರ್ತೆ  ಚಿಕ್ಕಮಗಳೂರು  ಜು.25
ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮದಡಿಯಲ್ಲಿ ಆ.1ರಂದು ಜಿಲ್ಲೆಯ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಲಿದೆ.
ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಮತ್ತು ವಸತಿ ಶಾಲೆಗಳಲ್ಲಿ ಕಲಿಯುತ್ತಿರುವ 1 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳ ಆರೋಗ್ಯವನ್ನು ವೈದ್ಯರು ಈ ಸಂದರ್ಭದಲ್ಲಿ ಪರೀಕ್ಷಿಸಲಿದ್ದಾರೆ.
ಈ ಸಂಬಂಧ ಅಪರ ಜಿಲ್ಲಾಧಿಕಾರಿ ಬಾಲಚಂದ್ರ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು.
ಜಿಲ್ಲೆಯ ಸರಕಾರಿ ಶಾಲೆಗಳ 92,290 ವಿದ್ಯಾರ್ಥಿಗಳು, ಖಾಸಗಿ ಶಾಲೆಗಳ 56,715 ಹಾಗೂ ವಸತಿ ಶಾಲೆಗಳ 4,911 ವಿದ್ಯಾರ್ಥಿಗಳ ಆರೋಗ್ಯವನ್ನು ಈ ಸಂದರ್ಭದಲ್ಲಿ ತಪಾಸಣೆ ಮಾಡಲಾಗುವುದು.
 ತಪಾಸಣೆ ಬಳಿಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆ ಅಥವಾ ಸರ್ಜರಿ ಅಗತ್ಯ ಕಂಡುಬಂದಲ್ಲಿ ತಾಲೂಕು ಅಥವಾ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಅಗತ್ಯವಿದ್ದಲ್ಲಿ ಬೆಂಗಳೂರಿನಲ್ಲಿರುವ ಉನ್ನತ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಭೆಯಲ್ಲಿ ತಿಳಿಸಿದರು.
ಮಕ್ಕಳ ಆರೋಗ್ಯ ತಪಾಸಣೆಗೆ ವೈದ್ಯರು ಹಾಗೂ ನರ್ಸ್‌ಗಳನ್ನೊಳಗೊಂಡ 14 ತಂಡಗಳನ್ನು ರಚಿಸಲಾಗಿದ್ದು, ತಂಡದವರು ವರ್ಷ ಪೂರ್ತಿ ಮಕ್ಕಳ ಆರೋಗ್ಯ ತಪಾಸಣೆ ಕೈಗೊಳ್ಳಲಿದ್ದಾರೆ ಎಂದರು.
ಈ ಯೋಜನೆಯಡಿ ಕಳೆದ ವರ್ಷ ಹೆಚ್ಚಿನ ಚಿಕಿತ್ಸೆಗಾಗಿ ಶಿಫಾರಸು ಮಾಡಿದ ಮಕ್ಕಳ ಆರೋಗ್ಯದ ಸ್ಥಿತಿಗಳ ಬಗ್ಗೆ ಪೋಷಕರನ್ನು ಸಂಪರ್ಕಿಸಿ ಇನ್ನು ಚಿಕಿತ್ಸೆ ಅವಶ್ಯವಿದ್ದಲ್ಲಿ ಅವರಿಗೆ ಮಾರ್ಗದರ್ಶನ ನೀಡಲು ಕಾರ್ಯಪ್ರವೃತ್ತರಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.  
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಬಿ. ರಾಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement