'ಡೆಂಘೀ ತಡೆಗೆ ಕ್ರಮ ಅಗತ್ಯ'
ನರಸಿಂಹರಾಜಪುರ: ಡೆಂಘೀ ಜ್ವರ ತಡೆಗೆ ಸೊಳ್ಳೆಗಳನ್ನು ನಿಯಂತ್ರಣ ಮಾಡುವುದು ಮುಖ್ಯವಾಗಿದ್ದು ಆರೋಗ್ಯ ಇಲಾಖೆಯು ಎಲ್ಲಾ ಮುಂಜಾಗ್ರತೆ ಕ್ರಮ ಕೈಗೊಂಡಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಸೀಮಾ ತಿಳಿಸಿದರು.
ಅವರು ಬುಧವಾರ ಪಟ್ಟಣ ಪಂಚಾಯ್ತಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಹಾಗೂ ಪಟ್ಟಣ ಪಂಚಾಯ್ತಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಡೆಂಗ್ಯೂ ಜ್ವರ ತಡೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪೂರ್ವ ಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.
ಲಾರ್ವಾ ಸಮೀಕ್ಷೆ: ಆರೋಗ್ಯ ಇಲಾಖೆಯಿಂದ ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತಯರನ್ನೊಳಗೊಂಡ ತಂಡಗಳನ್ನು ರಚಿಸಲಾಗಿದ್ದು ಈ ತಂಡವು ತಾಲೂಕಿನ 5 ಆರೋಗ್ಯ ಕೇಂದ್ರದಿಂದ ತಾಲೂಕಿನ ಎಲ್ಲಾ 15,530 ಮನೆಗಳಿಗೆ ಭೇಟಿ ನೀಡಿ ಸೊಳ್ಳೆಗಳ ನಿಯಂತ್ರಣದ ಬಗ್ಗೆ ಹಾಗೂ ಲಾರ್ವಾ ಸಮೀಕ್ಷೆ ನಡೆಸಲಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಡೆಂಗ್ಯೂ ಜ್ವರ ಬಂದರೆ ನೀಡಬೇಕಾದ ಚಿಕಿತ್ಸೆಗೆ ಸಂಬಂಧಪಟ್ಟ ಎಲ್ಲಾ ಔಷದಗಳು ದಾಸ್ತಾನು ಇದೆ ಎಂದರು.
ಡೆಂಗಿ ಜ್ವರವು ಈಡಿಸ್ ಇಜಿಫ್ಟೈ ಎಂಬ ಸೊಳ್ಳೆಯ ಕಚ್ಚಿವಿಕೆಯಿಂದ ಬರಲಿದೆ. ಈ ಸೊಳ್ಳೆಗಳು ನಿಂತ ನೀರಿನಲ್ಲಿ ತಮ್ಮ ಸಂತಾನಾಭಿವೃದ್ದಿ ಹೊಂದಿ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತದೆ. ಆದ್ದರಿಂದ ಮನೆಯಲ್ಲಿರುವ ನೀರು ಶೇಖರಣಾ ತೊಟ್ಟಿಗಳನ್ನು ಭದ್ರವಾಗಿ ಮುಚ್ಚಬೇಕು. ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಮನೆಯಲ್ಲಿ ಎಲ್ಲರೂ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಸೊಳ್ಳೆಗಳ ಹತೋಟಿಗೆ ಆರೋಗ್ಯ ಇಲಾಖೆಯ ಜೊತೆಗೆ ಸಾರ್ವಜನಿಕರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿದರು. ಪಟ್ಟಣ ಪಂಚಾಯ್ತಿ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರ್ ಕೃಷ್ಣಮೂರ್ತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವರ್ಗೀಸ್ ಸ್ವಾಗತಿಸಿದರು. ಬೇಬಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪುಷ್ಪಾ ಆಸ್ಪತ್ರೆಯ ಡಾ.ಮೇರಿ ಸೂಸಮ್ಮ, ಪಟ್ಟಣ ಪಂಚಾಯತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.