ಮನೆ ಪಾಠ ದಂಧೆ ತಡೆಯಲು ಒತ್ತಾಯ
ಕಪ್ರ ವಾರ್ತೆ, ಚಿಕ್ಕಮಗಳೂರು, ಜೂ. 21
ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿರುವ ಮನೆ ಪಾಠದ ದಂಧೆಯನ್ನು (ಟ್ಯೂಷನ್ ಮಾಫಿಯಾ) ತಕ್ಷಣ ತಡೆಗಟ್ಟುವಂತೆ ಕರವೇ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ವೇದಿಕೆಯ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವಿ. ಯಶವಂತ್ ಅವರನ್ನು ಗುರುವಾರ ಸಂಜೆ ಭೇಟಿ ಮಾಡಿ ಮನವಿ ಸಲ್ಲಿಸಿದ ಕಾರ್ಯಕರ್ತರು ಕಾನೂನು ಬಾಹಿರವಾಗಿ ಮನೆ ಪಾಠ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಆರೋಪ: ಕೆಲ ವರ್ಷಗಳಿಂದ ಜಿಲ್ಲೆಯಲ್ಲಿ ಮನೆ ಪಾಠದ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಶಿಕ್ಷಕರು ಮತ್ತು ಉಪನ್ಯಾಸಕರು ಶಾಲೆ ಕಾಲೇಜುಗಳಲ್ಲಿ ಪಾಠ ಮಾಡುವುದನ್ನು ಬಿಟ್ಟು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮನೆ ಪಾಠಕ್ಕೆ ಬರುವಂತೆ ಒತ್ತಡ ಹೇರುತ್ತಿದ್ದಾರೆ. ಟ್ಯೂಷನ್‌ಗೆ ಹೋಗದ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಕ್ರಮವಾಗಿ ಮನೆಪಾಠದ ದಂಧೆ ನಡೆಸುತ್ತಿರುವ ಶಿಕ್ಷಕರು ಮತ್ತು ಉಪನ್ಯಾಸಕರು ಸಾವಿರಾರು ರುಪಾಯಿ ಶುಲ್ಕವನ್ನು ವಸೂಲಿ ಮಾಡುತ್ತಿದ್ದಾರೆ. ಇದನ್ನು ಕೊಟ್ಟು ಮನೆಪಾಠಕ್ಕೆ ಹೋಗಲು ಆಗದ ಬಡ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.
ಕ್ರಮಕ್ಕೆ ಆಗ್ರಹ: ಕಳೆದ ವರ್ಷ ನಗರದ ಬೇಲೂರು ರಸ್ತೆಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಮನೆ ಪಾಠಕ್ಕೆ ಹೋಗದ ಪ್ರಥಮ ಪಿಯುಸಿಯ 45 ಬಡ ವಿದ್ಯಾರ್ಥಿಗಳನ್ನು ಉಪನ್ಯಾಸಕರು ಉದ್ದೇಶಪೂರ್ವಕವಾಗಿ ಕಡಿಮೆ ಅಂಕ ನೀಡಿ ಅನುತ್ತೀರ್ಣಗೊಳಿಸಿದ್ದಾರೆ ಎಂದು ಆರೋಪಿಸಿದ ಕಾರ್ಯಕರ್ತರು ಆ ಉಪನ್ಯಾಸಕರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹಲವಾರು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಮನೆ ಪಾಠದ ದಂಧೆಯನ್ನು ತಡೆಗಟ್ಟುವಂತೆ ಹಲವಾರು ಬಾರಿ ಒತ್ತಾಯಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ ಕಾರ್ಯಕರ್ತರು, ಈಗಲಾದರೂ ಜಿಲ್ಲಾಡಳಿತ ಎಚ್ಚೆತ್ತು ತಕ್ಷಣ ಕಾನೂನು ಬಾಹಿರ ಟ್ಯೂಷನ್ ಮಾಫಿಯಾವನ್ನು ಸಂಪೂರ್ಣ ನಿಲ್ಲಿಸುವ ಮೂಲಕ ಬಡ ವಿದ್ಯಾರ್ಥಿಗಳ ನೆರವಿಗೆ ದಾವಿಸಬೇಕು ಎಂದು ಒತ್ತಾಯಿಸಿದರು.
ಭರವಸೆ: ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಯಶವಂತ್ ಪದವಿ ಪೂರ್ವ ಇಲಾಖೆಯ ಉಪ ನಿರ್ದೇಶಕರೊಂದಿಗೆ ಚರ್ಚಿಸಿ ನಂತರ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಕೆಂಪನಹಳ್ಳಿ ಅಶೋಕ್, ಕೋಟೆ ಮಲ್ಲೇಶ್, ಕಾರ್ಯದರ್ಶಿ ಕುಮಾರ್, ನಗರ ಕಾರ್ಯದರ್ಶಿ ಇರ್ಷಾದ್ ಅಹ್ಮದ್, ಶರತ್‌ಕುಮಾರ್ ಹಾಜರಿದ್ದರು.