ಮಣಿಪಾಲ್ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜೂ.24
ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಸೇರಿದಂತೆ ವಿದ್ಯಾರ್ಥಿಗಳ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ (ಎಐಆರ್ಎಸ್ಓ) ನೇತೃತ್ವದಲ್ಲಿ ವಿದ್ಯಾರ್ಥಿನಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಆರ್. ಮಂಜುನಾಥ್ ಹಾಗೂ ಜಿಲ್ಲಾ ಕಾರ್ಯದರ್ಶಿ ಕೆ.ಎಚ್. ಮಹೇಶ್ ಅವರ ನೇತೃತ್ವದಲ್ಲಿ ಇಲ್ಲಿನ ಹಳೇ ತಾಲೂಕು ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಗಳು ಅತ್ಯಾಚಾರ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಲ್ಲಿ ವಿಫಲವಾಗಿರುವುದರಿಂದ ನಿರಂತರವಾಗಿ ಅತ್ಯಾಚಾರ ನಡೆಯುತ್ತಿದೆ. ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವುದು ಅಮಾನವೀಯ ಘಟನೆ. ಇದನ್ನು ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.
ಭಯದ ವಾತಾವರಣ: ಅತ್ಯಾಚಾರವನ್ನು ಎಲ್ಲೆಂದರಲ್ಲಿ ಎಸಗುತ್ತಿರುವುದರಿಂದ ವಿದ್ಯಾರ್ಥಿನಿಯರು ಭಯದಿಂದ ಶಾಲಾ, ಕಾಲೇಜುಗಳಿಗೆ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಾರಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಸುಮಾರು 3-4 ಕಿ.ಮೀ. ದೂರದಲ್ಲಿರುವ ಶಾಲಾ, ಕಾಲೇಜುಗಳಿಗೆ ನಡೆದುಕೊಂಡು ಹೋಗಬೇಕಾಗಿರುವುದರಿಂದ ವ್ಯಾಸಂಗವನ್ನು ಬಿಟ್ಟು ಕೂಲಿ ಕೆಲಸಕ್ಕೆ ಹೋಗುವಂತಾಗಿದೆ. ಅದ್ದರಿಂದ ಅತ್ಯಾಚಾರ ಎಸಗುವವರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಯಾಣದರ ಏರಿಕೆಗೆ ಖಂಡನೆ: ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದ ಇಡೀ ದೇಶದ ಜನ ಸಾಮಾನ್ಯರು ಭಾರಿ ಸಂಕಷ್ಟಕ್ಕೆ ಈಡಾಗಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ತೈಲ ಬೆಲೆ ಹೆಚ್ಚಳ ಮಾಡುವುದರ ಮೂಲಕ ಹಾಗೂ ರಾಜ್ಯ ಸರ್ಕಾರ ಬಸ್ ಪ್ರಯಾಣದರ ಹೆಚ್ಚಿಸುವುದರ ಮೂಲಕ ಸಾಮಾನ್ಯ ಬಡ ವಿದ್ಯಾರ್ಥಿಗಳ ಹಾಗೂ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳು ಹೆಚ್ಚು ಪ್ರವೇಶ ಶುಲ್ಕವನ್ನು ನೀಡುತ್ತ ಪಠ್ಯ ಪುಸ್ತಕದ ಸಾಮಾಗ್ರಿಗಳ ಹೆಚ್ಚಳದಿಂದ ಹಾಗೂ ಸಮವಸ್ತ್ರ, ಬ್ಯಾಗ್ ಇತ್ಯಾದಿ ದರದ ಹೆಚ್ಚಳದಿಂದಲೂ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡುತ್ತಿರುವ ಸಂದರ್ಭದಲ್ಲಿ ಸರ್ಕಾರವು ಬೆಲೆ ಹೆಚ್ಚಳ ಮಾಡುವುದರ ಮೂಲಕ ವಿದ್ಯಾರ್ಥಿಗಳನ್ನು ವ್ಯಾಸಂಗ ಮಾಡದಂತೆ ವಂಚನೆ ಮಾಡಲಾಗುತ್ತಿದೆ. ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಕಾರ್ಪೋರೇಟ್ಗಳ ಕುಟುಂಬಗಳ ಮತ್ತು ತೈಲೋದ್ಯಮಿಗಳ ಏಜೆಂಟರೆಂದು ಬೆಲೆ ಹೆಚ್ಚಳ ಮಾಡುವುದರ ಮೂಲಕ ಸರ್ಕಾರ ಸಾಬೀತುಪಡಿಸಿದೆ ಎಂದು ದೂಷಿಸಿದ್ದಾರೆ.
ಪಠ್ಯಪುಸ್ತಕ ವಿತರಿಸಿ: ಶಾಲಾ, ಕಾಲೇಜುಗಳು ಆರಂಭವಾಗಿ ಒಂದು ತಿಂಗಳು ಕಳೆದರು ಸಹ ಇದುವರೆಗೂ ಸರಿಯಾಗಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿಲ್ಲ. ವಿದ್ಯಾರ್ಥಿಗಳು ಪಠ್ಯಪುಸ್ತಕಗಳಿಗಾಗಿ ಪರದಾಡುತ್ತಿದ್ದಾರೆ. ಇದರಿಂದ ಓದಿಗೆ ಅನಾನೂಕೂಲವಾಗಿದೆ. ಅದ್ದರಿಂದ ಪಠ್ಯಪುಸ್ತಕಗಳ ಕೊರತೆಯಿಂದ ವಿದ್ಯಾರ್ಥಿಗಳನ್ನು ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಉಚಿತ ಬಸ್ ಪಾಸ್ ನೀಡಿ: ಏರಿಸಿರುವ ಬಸ್ ಪ್ರಯಾಣ ದರವನ್ನು ಇಳಿಸಬೇಕು. ಒಂದರಿಂದ ಪಿಯು ತರಗತಿಯ ವರೆಗೆ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಪಠ್ಯಪುಸ್ತಕಗಳನ್ನು ನೀಡಬೇಕು. ಶಾಲಾ ಕಾಲೇಜುಗಳಲ್ಲಿ ಡೋನೇಷನ್ ಹಾವಳಿ ನಿಯಂತ್ರಿಸಿ ಎಲ್ಲಾ ಶಾಲಾ ಕಾಲೇಜು ಹಾಸ್ಟೇಲ್ಗಳಿಗೆ ಮೂಲಭೂತ ಸೌಲಭ್ಯ ನೀಡಬೇಕು. ಶಿಕ್ಷಕರು, ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಪ್ರತ್ಯೇಕ ಮಹಿಳಾ ಕಾಲೇಜು ಸ್ಥಾಪನೆ ಮಾಡಬೇಕು.
ಖಾಸಗಿ ವಿಶ್ವವಿದ್ಯಾನಿಲಯಗಳನ್ನು ರದ್ದುಪಡಿಸಬೇಕು. ಹಾಸ್ಟೇಲ್ಗಳಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಿ, ಪ್ರವೇಶವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.