ಪಠ್ಯಪುಸ್ತಕ ವಿತರಣೆಗೆ ಎಬಿವಿಪಿ ಆಗ್ರಹ
ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಜೂ.25
ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಶೀಘ್ರ ಪಠ್ಯಪುಸ್ತಕಗಳನ್ನು ವಿತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಎಬಿವಿಪಿ ಜಿಲ್ಲಾ ಸಹ ಸಂಚಾಲಕ ಸಂತೋಷ್ ಕೋಟ್ಯಾನ್ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ಈವರೆಗೂ ಇಬ್ಬರು ಸಚಿವರನ್ನು ಕಂಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೈಕ್ಷಣಿಕ ಗುಣಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಜಿಲ್ಲೆಯ ಕಳೆದ ವರ್ಷದ ಫಲಿತಾಂಶಕ್ಕೆ ಈ ವರ್ಷದ ಫಲಿತಾಂಶ ಹೋಲಿಸಿದರೆ ಗಣನೀಯವಾಗಿ ಇಳಿಕೆಯಾಗಿದ್ದು, ಇದಕ್ಕೆ ಮೂಲ ಕಾರಣ ಏನೆಂಬುದು ಅವಲೋಕನ ಮಾಡುವಂತ ಗೋಜಿಗೆ ಇಲ್ಲಿಯವರೆಗೂ ಅಧಿಕಾರಿಗಳು ಮುಂದಾಗಿಲ್ಲ . ಇಂತಹ ಬೇಜವಾಬ್ದಾರಿ ಅಧಿಕಾರಿಗಳನ್ನು ಶಿಕ್ಷಣ ಇಲಾಖೆಯಿಂದ ಬೇರೆ ಇಲಾಖೆಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.
ಉಪನ್ಯಾಸಕರ ಕೊರತೆ: ಶಾಲಾ, ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳು, ಉಪನ್ಯಾಸಕರ ಕೊರತೆ ಹೆಚ್ಚಿದ್ದು, ಈ ಸಮಸ್ಯೆಯು ಶೈಕ್ಷಣಿಕ ಗುಣಮಟ್ಟವು ಇಳಿಕೆಗೆ ಕಾರಣವಾಗಿದೆ. ಇಷ್ಟಾದರೂ ಈ ಎಲ್ಲಾ ಸಮಸ್ಯೆಗಳನ್ನು ಜಿಲ್ಲೆಯ ಶಾಸಕರು, ಅಧಿಕಾರಿಗಳು, ಸರ್ಕಾರದ ಗಮನ ಸೆಳೆಯಲು ವಿಫಲರಾಗಿದ್ದಾರೆ. ಇನ್ನಾದರು ಈ ಗಂಭೀರ ಸಮಸ್ಯೆಗೆ ಜಿಲ್ಲಾಡಳಿತ ಸರ್ಕಾರದ ಗಮನ ಸೆಳೆದು ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದು ಮನವಿ ಮಾಡಿದ್ದಾರೆ.
ಸರ್ಕಾರಿ ನಗರ ಸಾರಿಗೆ ಪರೀಚಿಕೆ: ಶಾಲಾ ಕಾಲೇಜುಗಳು ಆರಂಭವಾಗಿ ತಿಂಗಳು ಕಳೆದರೂ ಪಠ್ಯ ಪುಸ್ತಕಗಳು ಹಾಗೂ ರಿಯಾಯ್ತಿ ಬಸ್ಪಾಸ್ಗಳು ವಿತರಣೆ ಆಗದಿದ್ದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಸಮಸ್ಯೆ ಉಂಟಾಗಿದ್ದು, ಬಡ ವಿದ್ಯಾರ್ಥಿಗಳಿಗೆ ಈ ಸಮಸ್ಯೆಯಿಂದ ಶಾಲಾ ಕಾಲೇಜುಗಳಿಗೆ ಬರುವುದಕ್ಕೆ ತುಂಬಾ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಬಹುದಿನದ ಬೇಡಿಕೆಯಾದ ಸರ್ಕಾರಿ ನಗರ ಸಾರಿಗೆ ಸೌಲಭ್ಯವು ಚಿಕ್ಕಮಗಳೂರು ನಗರಕ್ಕೆ ಮರೀಚಿಕೆಯಾಗಿದ್ದು, ಕೇವಲ ಭರವಸೆಯಾಗಿದೆ. ಇದು, ಜಿಲ್ಲಾಡಳಿತ ಹಾಗೂ ಕೆಎಸ್ಆರ್ಟಿಸಿ ನಡುವಿನ ಮುಸುಕಿನ ಗುದ್ದಾಟಕ್ಕೆ ವಿದ್ಯಾರ್ಥಿಗಳು ಹಾಗ ಸಾರ್ವಜನಿಕರು ಬಲಿಯಾಗುತ್ತಿದ್ದಾರೆ.
ಡೋನೇಷನ್ ಹಾವಳಿ: ನಗರದ ಬಹುತೇಕ ಖಾಸಗಿ ಹಾಗೂ ಸರ್ಕಾರಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಡೋನೇಷನ್ ಹಾವಳಿ ಹೆಚ್ಚಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವಿವಿಧ ಸಂಘಟನೆಗಳು ಹಾಗೂ ಪೋಷಕರು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಈ ಸಮಸ್ಯೆ ಬಗ್ಗೆ ಜಿಲ್ಲಾಡಳಿತ ಧೋರಣೆ ಗಮನಿಸಿದರೆ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡಲಿದೆ. ಈ ದಂಧೆಯಲ್ಲಿ ಹಲವು ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳನ್ನು ಜಿಲ್ಲಾಡಳಿತ ಶೀಘ್ರ ಬಗೆಹರಿಸದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಶೀಘ್ರ ಪಠ್ಯಪುಸ್ತಕಗಳನ್ನು ವಿತರಿಸಬೇಕು. ವಿದ್ಯಾರ್ಥಿಗಳಿಗೆ ರಿಯಾಯ್ತಿ ಬಸ್ ಪಾಸ್ ವಿತರಿಸಬೇಕು. ನಗರಕ್ಕೆ ಸರ್ಕಾರಿ ನಗರ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಡೋನೇಷನ್ ಹಾವಳಿ ತಡೆಗಟ್ಟಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.